- Kannada News Photo gallery Cricket photos Cameron Green's Record Breaking Century Leads Australia to ODI Win
AUS vs SA: ಆಫ್ರಿಕಾ ವಿರುದ್ಧ ವೇಗದ ಶತಕ; 19 ವರ್ಷಗಳ ಹಳೆಯ ದಾಖಲೆ ಮುರಿದ ಕ್ಯಾಮರೂನ್ ಗ್ರೀನ್
Cameron Green's Record-Breaking Century: ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಗೆಲುವು ಸಾಧಿಸಿತು. ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ ಮತ್ತು ಕ್ಯಾಮರೂನ್ ಗ್ರೀನ್ ಶತಕ ಗಳಿಸುವ ಮೂಲಕ ಆಸ್ಟ್ರೇಲಿಯಾ 431 ರನ್ ಗಳಿಸಿತು. ದಕ್ಷಿಣ ಆಫ್ರಿಕಾ ಕೇವಲ 155 ರನ್‌ಗಳಿಗೆ ಆಲೌಟ್ ಆಯಿತು. ಕ್ಯಾಮರೂನ್ ಗ್ರೀನ್ ಕೇವಲ 47 ಎಸೆತಗಳಲ್ಲಿ ಶತಕ ಬಾರಿಸಿ ಹೊಸ ದಾಖಲೆ ನಿರ್ಮಿಸಿದರು.
Updated on: Aug 24, 2025 | 10:20 PM

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಆಸ್ಟ್ರೇಲಿಯಾ ತಂಡವು ಕ್ಲೀನ್ ಸ್ವೀಪ್ನಿಂದ ಪಾರಾಯಿತು. ಆಸ್ಟ್ರೇಲಿಯಾ ನೀಡಿದ 431 ರನ್ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡವು 155 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ 1991 ರ ನಂತರ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ದಕ್ಷಿಣ ಆಫ್ರಿಕಾ ತನ್ನ ಅತಿದೊಡ್ಡ ಸೋಲನ್ನು ಎದುರಿಸಿತು. ಆಸೀಸ್ ತಂಡದ ಈ ಗೆಲುವಿನಲ್ಲಿ ಟಾಪ್ ಆರ್ಡರ್ ಬ್ಯಾಟರ್ಗಳ ಪಾತ್ರ ಪ್ರಮುಖವಾಗಿತ್ತು.

ಆರಂಭಿಕ ಟ್ರಾವಿಸ್ ಹೆಡ್, ನಾಯಕ ಮಿಚೆಲ್ ಮಾರ್ಷ್ ಹಾಗೂ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಸ್ಫೋಟಕ ಶತಕ ಬಾರಿಸಿ ತಂಡವನ್ನು 431 ರನ್ಗಳ ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಅದರಲ್ಲೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅಬ್ಬರಿಸಿದ ಕ್ಯಾಮರೂನ್ ಗ್ರೀನ್ ಈ ಪಂದ್ಯದಲ್ಲಿ ಕೇವಲ 47 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕೇವಲ 47 ಎಸೆತಗಳಲ್ಲಿ ತಮ್ಮ ಏಕದಿನ ವೃತ್ತಿಜೀವನದ ಮೊದಲ ಶತಕ ಗಳಿಸಿದ ಕ್ಯಾಮರೂನ್ ಗ್ರೀನ್, ತಮ್ಮ ಹೆಸರಿನಲ್ಲಿ ಅನೇಕ ದಾಖಲೆಗಳನ್ನು ನಿರ್ಮಿಸಿದ್ದಾರೆ. ಗ್ಲೆನ್ ಮ್ಯಾಕ್ಸ್‌ವೆಲ್ ನಂತರ ಎರಡನೇ ಅತಿ ವೇಗದ ಶತಕ ಗಳಿಸಿದ ಎರಡನೇ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2023 ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಮ್ಯಾಕ್ಸ್‌ವೆಲ್ 40 ಎಸೆತಗಳಲ್ಲಿ ಶತಕ ಗಳಿಸಿದರು.

2015 ರಲ್ಲಿ ಶ್ರೀಲಂಕಾ ವಿರುದ್ಧ 51 ಎಸೆತಗಳಲ್ಲಿ ಶತಕ ಪೂರೈಸಿದ ಮ್ಯಾಕ್ಸ್‌ವೆಲ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 2013 ರಲ್ಲಿ, ಜೇಮ್ಸ್ ಫಾಕ್ನರ್ ಭಾರತದ ವಿರುದ್ಧ ಕೇವಲ 57 ಎಸೆತಗಳಲ್ಲಿ ಶತಕ ಗಳಿಸಿದರು. 2023 ರಲ್ಲಿ ನ್ಯೂಜಿಲೆಂಡ್ ವಿರುದ್ಧ 59 ಎಸೆತಗಳಲ್ಲಿ ಶತಕ ಪೂರೈಸಿದ ಟ್ರಾವಿಸ್ ಹೆಡ್ ಐದನೇ ಸ್ಥಾನದಲ್ಲಿದ್ದಾರೆ.

ಅಲ್ಲದೆ 47 ಎಸೆತಗಳಲ್ಲಿ ಶತಕ ಗಳಿಸಿದ ಕ್ಯಾಮರೂನ್ ಗ್ರೀನ್ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಅತ್ಯಂತ ವೇಗದ ಶತಕ ಸಿಡಿಸಿದ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಈ ಮೂಲಕ ಅವರು 2006 ರಲ್ಲಿ 66 ಎಸೆತಗಳಲ್ಲಿ ಇದೇ ಆಫ್ರಿಕಾ ವಿರುದ್ಧ ಶತಕ ಬಾರಿಸಿದ್ದ ಮ್ಯಾಥ್ಯೂ ಹೇಡನ್ ಅವರ ದಾಖಲೆಯನ್ನು ಮುರಿದರು. ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಯೂಸುಫ್ ಪಠಾಣ್ 68 ಎಸೆತಗಳಲ್ಲಿ ಶತಕ ಬಾರಿಸಿದ್ದರು.

ಕ್ಯಾಮರೂನ್ ಗ್ರೀನ್ ಇದುವರೆಗೆ 31 ಏಕದಿನ ಪಂದ್ಯಗಳನ್ನು ಆಡಿದ್ದಾರೆ, ಇದರಲ್ಲಿ ಅವರು 43.44 ಸರಾಸರಿಯಲ್ಲಿ 782 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು ಎರಡು ಅರ್ಧಶತಕಗಳು ಸೇರಿವೆ. ಈ ಸಮಯದಲ್ಲಿ, ಅವರು 20 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ.

ಆಸ್ಟ್ರೇಲಿಯಾದ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಮೂವರು ಬ್ಯಾಟ್ಸ್‌ಮನ್‌ಗಳು ಒಂದೇ ಪಂದ್ಯದಲ್ಲಿ ಶತಕ ಗಳಿಸಿದ್ದು ಇದೇ ಮೊದಲು. ಗ್ರೀನ್‌ಗಿಂತ ಮೊದಲು, ಟ್ರಾವಿಸ್ ಹೆಡ್ ಮತ್ತು ಮಿಚೆಲ್ ಮಾರ್ಷ್ ಕೂಡ ಈ ಪಂದ್ಯದಲ್ಲಿ ಶತಕ ಬಾರಿಸುವಲ್ಲಿ ಯಶಸ್ವಿಯಾಗಿದ್ದರು. ಆಸ್ಟ್ರೇಲಿಯಾ ಹೊರತುಪಡಿಸಿ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ವಿಶ್ವ ಕ್ರಿಕೆಟ್‌ನಲ್ಲಿ ಈ ಸಾಧನೆಯನ್ನು ಸಾಧಿಸಿವೆ.




