
ವೆಲ್ಲಿಂಗ್ಟನ್ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆತಿಥೇಯ ನ್ಯೂಝಿಲೆಂಡ್ ತಂಡ 3 ವಿಕೆಟ್ ಕಳೆದುಕೊಂಡು 215 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಅಂತಿಮ ಓವರ್ನ ಕೊನೆಯ ಎಸೆತದಲ್ಲಿ ಫೋರ್ ಬಾರಿಸಿ ರೋಚಕ ಜಯ ಸಾಧಿಸಿತು.

ಈ ರೋಚಕ ಜಯದ ಹೊರತಾಗಿಯೂ ಈ ಪಂದ್ಯದ ಮೂಲಕ ಆಸ್ಟ್ರೇಲಿಯಾ ತಂಡವು ಹೀನಾಯ ದಾಖಲೆಯೊಂದನ್ನು ಬರೆದಿದೆ. ಅದು ಕೂಡ ಸತತವಾಗಿ 200+ ರನ್ಗಳನ್ನು ಬಿಟ್ಟು ಕೊಡುವ ಮೂಲಕ ಎಂಬುದು ವಿಶೇಷ.

ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸತತ ನಾಲ್ಕು ಪಂದ್ಯಗಳಲ್ಲಿ 200+ ರನ್ ನೀಡಿದ ಮೊದಲ ತಂಡವೆಂಬ ಅನಗತ್ಯ ದಾಖಲೆಯೊಂದನ್ನು ಆಸ್ಟ್ರೇಲಿಯಾ ತನ್ನದಾಗಿಸಿಕೊಂಡಿದೆ. ಈ ಹಿಂದೆ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳಲ್ಲಿ ಆಸ್ಟ್ರೇಲಿಯಾ 200 ಕ್ಕಿಂತ ಅಧಿಕ ರನ್ಗಳನ್ನು ಬಿಟ್ಟುಕೊಟ್ಟಿದ್ದರು.

ವಿಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಬೌಲರ್ಗಳು 20 ಓವರ್ಗಳಲ್ಲಿ 202 ರನ್ ನೀಡಿದ್ದರು. ಇನ್ನು 2ನೇ ಪಂದ್ಯದಲ್ಲಿ 207 ರನ್ಗಳನ್ನು ಚಚ್ಚಿಸಿಕೊಂಡಿದ್ದರು. ಹಾಗೆಯೇ 3ನೇ ಪಂದ್ಯದಲ್ಲಿ 220 ರನ್ಗಳನ್ನು ಹೊಡೆಸಿಕೊಂಡಿದ್ದರು.

ಇದೀಗ ನ್ಯೂಝಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯನ್ನರು 215 ರನ್ಗಳನ್ನು ಬಿಟ್ಟುಕೊಟ್ಟಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸತತವಾಗಿ 4 ಬಾರಿ 200+ ರನ್ ಹೊಡೆಸಿಕೊಂಡ ಮೊದಲ ತಂಡ ಎಂಬ ಅತ್ಯಂತ ಕಳಪೆ ದಾಖಲೆಯೊಂದನ್ನು ಆಸ್ಟ್ರೇಲಿಯಾ ತನ್ನದಾಗಿಸಿಕೊಂಡಿದೆ.

ಇನ್ನು ಈ 4 ಪಂದ್ಯಗಳಲ್ಲಿ ಆಸ್ಟ್ರೇಲಿಯಾ 200+ ರನ್ ನೀಡಿದ್ದರೂ, ಇದರಲ್ಲಿ ಮೂರು ಪಂದ್ಯಗಳಲ್ಲಿ ಕಾಂಗರೂ ಪಡೆ ಜಯಭೇರಿ ಬಾರಿಸಿದೆ. ಹೀಗಾಗಿ ರನ್ ಬಿಟ್ಟುಕೊಟ್ಟರೂ ಪಂದ್ಯವನ್ನು ಗೆಲ್ಲುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗುತ್ತಿರುವುದು ವಿಶೇಷ.

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್ , ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್ , ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್ , ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ.