
ಹರಿಣಗಳ ನಾಡಲ್ಲಿ ಆಯೋಜಿಸಿದ್ದ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಗೆ ತೆರೆಬಿದ್ದಿದೆ. ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ವನಿತೆಯರ ನಡುವೆ ನಡೆದ ಅಂತಿಮ ಫೈನಲ್ ಪಂದ್ಯದಲ್ಲಿ ಆಸೀಸ್ ತಂಡ 19 ರನ್ಗಳ ಜಯ ಸಾಧಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಈ ಮೂಲಕ ಆಸ್ಟ್ರೇಲಿಯಾ ಮಹಿಳಾ ತಂಡ ದಾಖಲೆಯ ಆರನೇ ಬಾರಿ ಟಿ20 ವಿಶ್ವಕಪ್ ಪ್ರಶಸ್ತಿ ಜಯಿಸಿದ ವಿಶೇಷ ಸಾಧನೆ ಮಾಡಿದೆ. ಅಲ್ಲದೆ ಎರಡನೇ ಬಾರಿ ಹ್ಯಾಟ್ರಿಕ್ ಪ್ರಶಸ್ತಿ ಗೆದ್ದ ತಂಡ ಎಂಬ ಕೀರ್ತಿಗೆ ಪಾತ್ರವಾಯಿತು. 2010, 2012, 2014 ಮತ್ತು 2018, 2020, 2023 ರಲ್ಲಿ ಟ್ರೋಫಿ ಎತ್ತಿ ಹಿಡಿದಿದೆ.

ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಕ್ರಿಕೆಟ್ ಇತಿಹಾಸದಲ್ಲಿ ಹೊಸ ವಿಶ್ವ ದಾಖಲೆಯನ್ನು ಕೂಡ ನಿರ್ಮಿಸಿದರು. ಟಿ20 ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವುದರೊಂದಿಗೆ ಅತೀ ಹೆಚ್ಚು ಐಸಿಸಿ ಟ್ರೋಫಿಗಳನ್ನು ಗೆದ್ದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆ ಮೆಗ್ ಲ್ಯಾನಿಂಗ್ ಪಾಲಾಯಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ಗೆ ಇಳಿದ ಆಸ್ಟ್ರೇಲಿಯಾ ಬಳಗಕ್ಕೆ ಅಲಿಸ್ಸಾ ಹೀಲಿ ಹಾಗೂ ಬೆತ್ ಮೂನಿ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ ಬಿರುಸಿನ 36 ರನ್ ಪೇರಿಸಿ ಹೀಲಿ (18) ಔಟಾದರು.

ನಂತರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಬೆತ್ ಮೂನಿ ಸೌತ್ ಆಫ್ರಿಕಾ ಬೌಲರ್ಗಳನ್ನು ಮನಸೊ ಇಚ್ಛೆ ದಂಡಿಸಿದರು. ಕೇವಲ 53 ಎಸೆತಗಳಲ್ಲಿ ಅಜೇಯ 74 ರನ್ ಬಾರಿಸಿದರು. ಪರಿಣಮ ಆಸ್ಟ್ರೇಲಿಯಾ ತಂಡವು 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 156 ರನ್ ಕಲೆಹಾಕಿತು.

ಟಾರ್ಗೆಟ್ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡವು ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕ ಆಟಗಾರ್ತಿ ತಜ್ಮಿನ್ ಬ್ರಿಟ್ಸ್ (10) ಬೇಗನೆ ಔಟಾದರು. ಆ ಬಳಿಕ ಬಂದ ಮರಿಜಾನ್ನೆ ಕಪ್ (11) ಗಾರ್ಡ್ನರ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಇನ್ನು 4ನೇ ಕ್ರಮಾಂಕದಲ್ಲಿ ಆಡಿದ ನಾಯಕಿ ಸುನೆ ಲೂಸ್ (2) ರನೌಟ್ಗೆ ಬಲಿಯಾದರು.

ಇದಾಗ್ಯೂ ಮತ್ತೊಂದೆಡೆ ಏಕಾಂಗಿಯಾಗಿ ಹೋರಾಟ ಮುಂದುವರೆಸಿದ ಆರಂಭಿಕ ಆಟಗಾರ್ತಿ ಲಾರಾ ವೊಲ್ವಾರ್ಡ್ಟ್ 48 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 5 ಫೋರ್ನೊಂದಿಗೆ 61 ರನ್ ಚಚ್ಚಿದ್ದು ಬಿಟ್ಟರೆ ಉಳಿದವರು ಸಾಥ್ ನೀಡಲಿಲ್ಲ. ಆಫ್ರಿಕಾ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲುಂಡಿತು.

ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ತೋರಿದ ಆ್ಯಶ್ ಗಾರ್ಡನರ್ ಸರಣಿಶ್ರೇಷ್ಠ ಪ್ರಶಸ್ತಿ ಬಾಚಿಕೊಂಡರು.