
ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಟೀಮ್ ಇಂಡಿಯಾ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಹೊರಬಿದ್ದಿದ್ದಾರೆ. ಅವರ ಬದಲಿಗೆ ಇದೀಗ ಯುವ ಆಲ್ರೌಂಡರ್ ಆಯುಷ್ ಬದೋನಿ (Ayush Badoni) ಅವರನ್ನು ಆಯ್ಕೆ ಮಾಡಲಾಗಿದೆ.

ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದ ವೇಳೆ ವಾಷಿಂಗ್ಟನ್ ಸುಂದರ್ ಅವರ ಪೆಕ್ಕೆಲುಬಿಗೆ ಗಾಯವಾಗಿತ್ತು. ಈ ಕಾರಣದ ಅವರಿಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಮುಂದಿನ ಎರಡು ಪಂದ್ಯಗಳಲ್ಲಿ ಸುಂದರ್ ಕಾಣಿಸಿಕೊಳ್ಳುವುದಿಲ್ಲ.

ಅಲ್ಲದೆ ವಾಷಿಂಗ್ಟನ್ ಸುಂದರ್ ಅವರ ಸ್ಥಾನಕ್ಕೆ ಬಲಗೈ ಆಲ್ರೌಂಡರ್ ಆಯುಷ್ ಬದೋನಿ ಆಯ್ಕೆಯಾಗಿದ್ದಾರೆ. ದೆಹಲಿ ಮೂಲದ ಬದೋನಿ ಇದೇ ಮೊದಲ ಬಾರಿಗೆ ಭಾರತ ತಂಡದಲ್ಲಿ ಸ್ಥಾನ ಪಡದಿದ್ದಾರೆ. ಅದರಂತೆ ರಾಜ್ಕೋಟ್ ಹಾಗೂ ಇಂದೋರ್ನಲ್ಲಿ ನಡೆಯಲಿರುವ ನ್ಯೂಝಿಲೆಂಡ್ ವಿರುದ್ಧ 2 ಪಂದ್ಯಗಳ ವೇಳೆ ಆಯುಷ್ ಬದೋನಿ ಟೀಮ್ ಇಂಡಿಯಾ ಜೊತೆ ಕಾಣಿಸಿಕೊಳ್ಳಲಿದ್ದಾರೆ.

ಆಯುಷ್ ಬದೋನಿ ಲಿಸ್ಟ್ ಎ ಕ್ರಿಕೆಟ್ನಲ್ಲಿ ಈವರೆಗೆ 27 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 22 ಇನಿಂಗ್ಸ್ ಆಡಿರುವ ಅವರು 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ 693 ರನ್ ಕಲೆಹಾಕಿದ್ದಾರೆ. ಹಾಗೆಯೇ 18 ವಿಕೆಟ್ಗಳನ್ನು ಸಹ ಕಬಳಿಸಿದ್ದಾರೆ. ಇನ್ನು ಐಪಿಎಲ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ 56 ಪಂದ್ಯಗಳನ್ನಾಡಿರುವ ಅವರು ಒಟ್ಟು 6 ಅರ್ಧಶತಕಗಳೊಂದಿಗೆ 963 ರನ್ಗಳಿಸಿದ್ದಾರೆ. ಇದೀಗ ಚೊಚ್ಚಲ ಬಾರಿಗೆ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ.

ಭಾರತ ಏಕದಿನ ತಂಡ : ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಆಯುಷ್ ಬದೋನಿ.