
ಪಾಕಿಸ್ತಾನ್ ಸೂಪರ್ ಲೀಗ್ನ (PSL 2024) 2ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಬಾಬರ್ ಆಝಂ (Babar Azam) ವಿಶೇಷ ದಾಖಲೆ ಬರೆದಿದ್ದಾರೆ. ಲಾಹೋರ್ನ ಗದ್ದಾಫಿ ಸ್ಡೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಪೇಶಾವರ್ ಝಲ್ಮಿ ಮತ್ತು ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡಗಳು ಮುಖಾಮುಖಿಯಾಗಿತ್ತು. ಮೊದಲು ಬ್ಯಾಟ್ ಮಾಡಿದ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡವು 5 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು.

ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಪೇಶಾವರ್ ಝಲ್ಮಿ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ಬ ಆಝಂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. 42 ಎಸೆತಗಳನ್ನು ಎದುರಿಸಿದ ಬಾಬರ್ 4 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 68 ರನ್ ಬಾರಿಸಿದರು.

ಈ ಅರ್ಧಶತಕದೊಂದಿಗೆ ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ 3 ಸಾವಿರ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆ ಬಾಬರ್ ಆಝಂ ಪಾತ್ರರಾದರು. ಬಾಬರ್ ಅವರನ್ನು ಹೊರತುಪಡಿಸಿ ಯಾವುದೇ ಬ್ಯಾಟರ್ ಪಿಎಸ್ಎಲ್ನಲ್ಲಿ 2500+ ರನ್ ಕಲೆಹಾಕಿಲ್ಲ ಎಂಬುದು ವಿಶೇಷ.

ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ ಇದುವರೆಗೆ 78 ಇನಿಂಗ್ಸ್ ಆಡಿರುವ ಬಾಬರ್ ಆಝಂ 3003 ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 29 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಪಿಎಸ್ಎಲ್ನ ಟಾಪ್ ರನ್ ಸರದಾರನಾಗಿ ಬಾಬರ್ ಆಝಂ ಗುರುತಿಸಿಕೊಂಡಿದ್ದಾರೆ.

ಇನ್ನು ಬಾಬರ್ ಆಝಂ ಅವರ ಈ ಅರ್ಧಶತಕದ ಹೊರತಾಗಿಯೂ ಈ ಪಂದ್ಯದಲ್ಲಿ ಪೇಶಾವರ್ ಝಲ್ಮಿ ಸೋಲುಂಡಿದೆ. ಕ್ವೆಟ್ಟಾ ಗ್ಲಾಡಿಯೇಟರ್ಸ್ ನೀಡಿದ 207 ರನ್ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಪೇಶಾವರ್ ಝಲ್ಮಿ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 190 ರನ್ ಕಲೆಹಾಕಿತು. ಈ ಮೂಲಕ 16 ರನ್ಗಳಿಂದ ಸೋಲೊಪ್ಪಿಕೊಂಡಿತು.