ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಅತೀ ವೇಗದ ಸೆಂಚುರಿ ಸಿಡಿಸಿದ ವಿಶ್ವ ದಾಖಲೆ ಸೌತ್ ಆಫ್ರಿಕಾ ಬ್ಯಾಟರ್ ಡೇವಿಡ್ ಮಿಲ್ಲರ್ ಪಾಲಾಗಿದೆ. ಲಾಹೋರ್ನ ಗದ್ಧಾಫಿ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ದ್ವಿತೀಯ ಸೆಮಿಫೈನಲ್ನಲ್ಲಿ ಸ್ಪೋಟಕ ಶತಕ ಬಾರಿಸಿ ಮಿಲ್ಲರ್ ಈ ಭರ್ಜರಿ ದಾಖಲೆ ನಿರ್ಮಿಸಿದ್ದಾರೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕಿವೀಸ್ ಪರ ಆರಂಭಿಕ ಆಟಗಾರ ರಚಿನ್ ರವೀಂದ್ರ (108) ಹಾಗೂ ಕೇನ್ ವಿಲಿಯಮ್ಸನ್ (102) ಶತಕ ಸಿಡಿಸಿದರು. ಈ ಸೆಂಚುರಿಗಳ ನೆರವಿನೊಂದಿಗೆ ನ್ಯೂಝಿಲೆಂಡ್ ತಂಡ 50 ಓವರ್ಗಳಲ್ಲಿ 362 ರನ್ ಕಲೆಹಾಕಿತು.
ಈ ಕಠಿಣ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡಕ್ಕೆ ಟೆಂಬಾ ಬವುಮಾ (56) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಾಸ್ಸಿ ವಂಡೆರ್ ಡುಸ್ಸೆನ್ 69 ರನ್ ಬಾರಿಸಿದರು. ಆ ಬಳಿಕ ಬಂದ ಡೇವಿಡ್ ಮಿಲ್ಲರ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು.
ಆರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಮಿಲ್ಲರ್ ಸಿಕ್ಸ್-ಫೋರ್ಗಳ ಸುರಿಮಳೆಗೈದರು. ಪರಿಣಾಮ ಕೊನೆಯ ಓವರ್ನ ಕೊನೆಯ ಎಸೆತದಲ್ಲಿ ಶತಕ ಪೂರೈಸಲು ಮಿಲ್ಲರ್ಗೆ ಎರಡು ರನ್ಗಳ ಅವಶ್ಯಕತೆಯಿತ್ತು. ಈ ವೇಳೆ 2 ರನ್ ಕಲೆಹಾಕುವ ಮೂಲಕ ಡೇವಿಡ್ ಮಿಲ್ಲರ್ ಶತಕ ಪೂರೈಸಿದರು. ಅದು ಸಹ ಕೇವಲ 67 ಎಸೆತಗಳಲ್ಲಿ ಎಂಬುದು ವಿಶೇಷ.
ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಅತೀ ವೇಗವಾಗಿ ಸೆಂಚುರಿ ಸಿಡಿಸಿದ ವಿಶ್ವ ದಾಖಲೆ ಮಿಲ್ಲರ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟರ್ ಜೋಶ್ ಇಂಗ್ಲಿಸ್ ಹೆಸರಿನಲ್ಲಿತ್ತು.
ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಜೋಶ್ ಇಂಗ್ಲಿಸ್ ಕೇವಲ 77 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಅತೀ ವೇಗದ ಶತಕದ ಸರದಾರ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಡೇವಿಡ್ ಮಿಲ್ಲರ್ ಅಳಿಸಿ ಹಾಕಿದ್ದಾರೆ.
ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ 67 ಎಸೆತಗಳನ್ನು ಎದುರಿಸಿದ ಡೇವಿಡ್ ಮಿಲ್ಲರ್ 4 ಭರ್ಜರಿ ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ ಅಜೇಯ ಶತಕ ಸಿಡಿಸಿದ್ದಾರೆ. ಈ ಮೂಲಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಚಾಂಪಿಯನ್ಸ್ ಟ್ರೋಫಿಯಲ್ಲಿ ಶತಕ ಬಾರಿಸಿದ ಸೌತ್ ಆಫ್ರಿಕಾದ ಅತ್ಯಂತ ಹಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ 35 ವರ್ಷದ ಮಿಲ್ಲರ್ ಪಾತ್ರರಾಗಿದ್ದಾರೆ.