David Warner: ಪಾಕ್ ವಿರುದ್ಧ ಸ್ಪೋಟಕ ಸೆಂಚುರಿ ಸಿಡಿಸಿದ ವಾರ್ನರ್
David Warner Century: ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಉಸ್ಮಾನ್ ಖ್ವಾಜಾ ಹಾಗೂ ಡೇವಿಡ್ ವಾರ್ನರ್ ಉತ್ತಮ ಆರಂಭ ಒದಗಿಸಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿ ಕೇವಲ 20 ಓವರ್ಗಳಲ್ಲಿ ತಂಡದ ಮೊತ್ತವನ್ನು 100ರ ಗಡಿದಾಟಿಸಿದ್ದರು.
Updated on: Dec 14, 2023 | 12:05 PM

Australia vs Pakistan 1st Test: ಪರ್ತ್ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಉಸ್ಮಾನ್ ಖ್ವಾಜಾ ಹಾಗೂ ಡೇವಿಡ್ ವಾರ್ನರ್ ಉತ್ತಮ ಆರಂಭ ಒದಗಿಸಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿ ಕೇವಲ 20 ಓವರ್ಗಳಲ್ಲಿ ತಂಡದ ಮೊತ್ತವನ್ನು 100ರ ಗಡಿದಾಟಿಸಿದ್ದರು.

ಈ ಹಂತದಲ್ಲಿ 41 ರನ್ ಬಾರಿಸಿದ ಉಸ್ಮಾನ್ ಖ್ವಾಜಾ ಔಟಾದರು. ಇದಾಗ್ಯೂ ಡೇವಿಡ್ ವಾರ್ನರ್ ಅಬ್ಬರ ಮುಂದುವರೆಯಿತು. ಪಾಕ್ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದ ವಾರ್ನರ್ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದರು.

ಆಕರ್ಷಕ ಹೊಡೆತಗಳ ಮೂಲಕ ಗಮನ ಸೆಳೆದ ಡೇವಿಡ್ ವಾರ್ನರ್ ಕೇವಲ 125 ಎಸೆತಗಳಲ್ಲಿ 1 ಭರ್ಜರಿ ಸಿಕ್ಸ್ ಹಾಗೂ 14 ಫೋರ್ಗಳೊಂದಿಗೆ ಸ್ಪೋಟಕ ಸೆಂಚುರಿ ಪೂರೈಸಿದರು. ಇದು ಟೆಸ್ಟ್ ಕ್ರಿಕೆಟ್ನಲ್ಲಿ ವಾರ್ನರ್ ಬ್ಯಾಟ್ನಿಂದ ಮೂಡಿಬಂದಿರುವ 26ನೇ ಶತಕ ಎಂಬುದು ವಿಶೇಷ.

ವಾರ್ನರ್ ಅವರ ಈ ಭರ್ಜರಿ ಶತಕದ ನೆರವಿನಿಂದ ಇದೀಗ ಆಸ್ಟ್ರೇಲಿಯಾ ತಂಡವು 43 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 190 ರನ್ ಕಲೆಹಾಕಿದೆ. ಸದ್ಯ ಕ್ರೀಸ್ನಲ್ಲಿ ಡೇವಿಡ್ ವಾರ್ನರ್ (102) ಹಾಗೂ ಸ್ಟೀವ್ ಸ್ಮಿತ್ (16) ಬ್ಯಾಟಿಂಗ್ ಮಾಡುತ್ತಿದ್ದಾರೆ.
























