
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ ಎಲಿಮಿನೇಟರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಜೆಮಿಮಾ ರೊಡ್ರಿಗಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 168 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಲಿಝಿಲ್ ಲೀ 43 ರನ್ ಬಾರಿಸಿದರೆ, ಶಫಾಲಿ ವರ್ಮಾ 31 ರನ್ ಚಚ್ಚಿದ್ದರು. ಇನ್ನು ಜೆಮಿಮಾ ರೊಡ್ರಿಗಸ್ 41 ರನ್ಗಳ ಕೊಡುಗೆ ನೀಡಿದರು. ಈ ಮೂಲಕ 15.4 ಓವರ್ಗಳಲ್ಲಿ 169 ರನ್ಗಳಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ವಿಕೆಟ್ಗಳ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಪ್ರತಿ ಸೀಸನ್ನಲ್ಲೂ ಫೈನಲ್ಗೇರಿದ ತಂಡವೆಂಬ ಭರ್ಜರಿ ದಾಖಲೆಯೊಂದನ್ನು ಡೆಲ್ಲಿ ಕ್ಯಾಪಿಟಲ್ಸ್ ತನ್ನದಾಗಿಸಿಕೊಂಡಿದೆ. ಅಂದರೆ 2023, 2024 ಮತ್ತು 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಫೈನಲ್ ಆಡಿತ್ತು.ಇದಾಗ್ಯೂ ಮೂರು ಬಾರಿ ಕೂಡ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು.

ಇದೀಗ ನಾಲ್ಕನೇ ಸೀಸನ್ನಲ್ಲೂ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ಗೆ ಪ್ರವೇಶಿಸಿದೆ. ಈ ಮೂಲಕ ಎಲ್ಲಾ ಸೀಸನ್ಗಳಲ್ಲೂ ಫೈನಲ್ಗೇರಿದ ಏಕೈಕ ತಂಡ ಎನಿಸಿಕೊಂಡಿದೆ. ಈ ಹೆಗ್ಗಳಿಕೆಯೊಂದಿಗೆ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.