
ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯವು ಫೆಬ್ರವರಿ 5 ರಿಂದ ಶುರುವಾಗಲಿದೆ. ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ. ಅದರಲ್ಲೂ ಯುವ ಆಟಗಾರನೊಬ್ಬ ಪಾದಾರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಈ ವರದಿಯಂತೆ, ರಾಜ್ಕೋಟ್ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಆಗಿ ಧ್ರುವ್ ಜುರೇಲ್ ಕಣಕ್ಕಿಳಿಯಲಿದ್ದಾರೆ. 23 ವರ್ಷದ ಧ್ರುವ್ ಕಳೆದ ಎರಡು ಪಂದ್ಯಗಳ ವೇಳೆ ಬೆಂಚ್ ಕಾದಿದ್ದರು.

ಅತ್ತ ಮೊದಲೆರೆಡು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಕೆಎಸ್ ಭರತ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 28 ರನ್ ಬಾರಿಸಿದ್ದ ಭರತ್, 2ನೇ ಇನಿಂಗ್ಸ್ನಲ್ಲಿ 41 ರನ್ಗಳಿಸಿದ್ದರು. ಇನ್ನು ದ್ವಿತೀಯ ಟೆಸ್ಟ್ನಲ್ಲಿ 6 ಮತ್ತು 17 ರನ್ ಬಾರಿಸಿದ್ದರು. ಅಂದರೆ 4 ಇನಿಂಗ್ಸ್ಗಳಿಂದ ಕೆಎಸ್ ಭರತ್ ಕೇವಲ 92 ರನ್ಗಳಿಸಲಷ್ಟೇ ಶಕ್ತರಾಗಿದ್ದರು.

ಹೀಗಾಗಿಯೇ ಮೂರನೇ ಟೆಸ್ಟ್ ಪಂದ್ಯದ ಪ್ಲೇಯಿಂಗ್ ಇಲೆವೆನ್ನಿಂದ ಕೆಎಸ್ ಭರತ್ ಅವರನ್ನು ಕೈ ಬಿಡುವ ಸಾಧ್ಯತೆ ದಟ್ಟವಾಗಿದೆ. ಅಲ್ಲದೆ ಅವರ ಬದಲಿಗೆ ಧ್ರುವ್ ಜುರೇಲ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಅದರಂತೆ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಜುರೇಲ್ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 19 ಇನಿಂಗ್ಸ್ ಆಡಿರುವ ಧ್ರುವ್ ಜುರೇಲ್ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ 790 ರನ್ ಕಲೆಹಾಕಿದ್ದಾರೆ. ಅದರಲ್ಲೂ ಸ್ಪೋಟಕ ಬ್ಯಾಟಿಂಗ್ಗೆ ಹೆಸರುವಾಸಿಯಾಗಿರುವ ಜುರೇಲ್ ಅವರನ್ನು ಬಾಝ್ಬಾಲ್ಗೆ ಪ್ರತಿತಂತ್ರವಾಗಿ ಬಳಸಿಕೊಳ್ಳಲು ಟೀಮ್ ಇಂಡಿಯಾಗೆ ಆಯ್ಕೆ ಮಾಡಲಾಗಿದೆ. ಅದರಂತೆ ಮೂರನೇ ಟೆಸ್ಟ್ ಪಂದ್ಯದ ಮೂಲಕ ಧ್ರುವ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್*, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೇಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.