
ಭಾನುವಾರದಂದು ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯವನ್ನು 74 ರನ್‌ಗಳಿಂದ ಗೆದ್ದ ನ್ಯೂಜಿಲೆಂಡ್, ಟಿ20 ಸರಣಿಯನ್ನು ಇನ್ನು ಜೀವಂತವಾಗಿರಿಸಿಕೊಂಡಿದೆ.

ವಾಸ್ತವವಾಗಿ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವೆ 4 ಪಂದ್ಯಗಳ ಟಿ20 ಸರಣಿ ನಡೆಯುತ್ತಿದ್ದು, ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಇಂಗ್ಲೆಂಡ್ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಹೀಗಾಗಿ ಸರಣಿ ಜೀವಂತವಾಗಿರಿಸಲು ನ್ಯೂಜಿಲೆಂಡ್ ಶತಾಯಗತಾಯ ಮೂರನೇ ಟಿ20 ಪಂದ್ಯದಲ್ಲಿ ಗೆಲ್ಲಲೇಬೇಕಿತ್ತು. ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕಿವೀಸ್ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 205 ರನ್ ಕಲೆಹಾಕಿತು.

ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಫಿನ್ ಅಲೆನ್ 53 ಎಸೆತಗಳಲ್ಲಿ 4 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 83 ರನ್ ಸಿಡಿಸಿದರು.

ಇವರನ್ನು ಹೊರತುಪಡಿಸಿ ನಾಲ್ಕನೇ ಕ್ರಮಾಂಕದಲ್ಲಿ ಅಬ್ಬರಿಸಿದ ಗ್ಲೆನ್ ಫಿಲಿಫ್ಸ್, 34 ಎಸೆತಗಳಲ್ಲಿ 5 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 69 ರನ್ ಸಿಡಿಸಿದರು.

ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್, ಕಿವೀಸ್ ದಾಳಿಗೆ ನಲುಗಿ 19ನೇ ಓವರ್ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 128 ರನ್ ಗಳಿಸಲಷ್ಟೇ ಶಕ್ತವಾಯಿತು.

ತಂಡದ ಪರ ನಾಯಕ ಬಟ್ಲರ್ 40 ರನ್ಗಳ ಏಕಾಂಗಿ ಹೋರಾಟ ನಡೆಸಿದರಾದರೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ.