ಟಿ20 ವಿಶ್ವಕಪ್ 2022 ರ ಎರಡನೇ ಸೆಮಿಫೈನಲ್ ಪಂದ್ಯವು ಭಾರತ ಮತ್ತು ಇಂಗ್ಲೆಂಡ್ ನಡುವೆ ಗುರುವಾರ ಅಡಿಲೇಡ್‌ನಲ್ಲಿ ನಡೆಯಲಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಗ್ರೂಪ್ 2 ರಲ್ಲಿ ಅಗ್ರಸ್ಥಾನದಲ್ಲಿದ್ದು, ಗ್ರೂಪ್ 1 ರಲ್ಲಿ ಎರಡನೇ ಸ್ಥಾನದಲ್ಲಿರುವ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಆದರೆ ಪಂದ್ಯಕ್ಕೂ ಮುನ್ನ ಆಂಗ್ಲರಿಗೆ ಆಘಾತ ಎದುರಾಗಿದೆ.
ಇಂಗ್ಲೆಂಡ್ ತಂಡದ ಸ್ಟಾರ್ ಟಿ20 ಬ್ಯಾಟ್ಸ್‌ಮನ್ ಡೇವಿಡ್ ಮಲಾನ್ ಇಂಜುರಿಯಿಂದಾಗಿ ಟೀಂ ಇಂಡಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
ಐಸಿಸಿ ಟಿ20 ರ್ಯಾಂಕಿಂಗ್‌ನಲ್ಲಿ ಅಗ್ರ 10 ಬ್ಯಾಟ್ಸ್‌ಮನ್‌ಗಳಲ್ಲಿ ಸ್ಥಾನ ಪಡೆದಿರುವ ಇಂಗ್ಲೆಂಡ್ನ ಏಕೈಕ ಬ್ಯಾಟ್ಸ್‌ಮನ್ ಮಲಾನ್, ವಾಸ್ತವವಾಗಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಗಾಯಗೊಂಡಿದ್ದರು.
ಸೆಮಿಫೈನಲ್‌ಗೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿದ್ದು, ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ ಮಲಾನ್ ಚೇತರಿಸಿಕೊಳ್ಳುವುದು ಅನುಮಾನವಾಗಿದೆ. ಆದರೆ ಮಲಾನ್ ಬೇಗ ಚೇತರಿಸಿಕೊಳ್ಳಲಿದ್ದಾರೆ ಎಂಬ ಭರವಸೆ ಇದೆ ಎಂದು ಆದಿಲ್ ರಶೀದ್ ಹೇಳಿದ್ದಾರೆ.
ಈ ವಿಶ್ವಕಪ್‌ನಲ್ಲಿ ಮಲಾನ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಅಫ್ಘಾನಿಸ್ತಾನ ವಿರುದ್ಧ ಅವರು ಕೇವಲ 18 ರನ್ ಸಿಡಿಸಿದರೆ, ಐರ್ಲೆಂಡ್ ವಿರುದ್ಧ 35 ರನ್ ಗಳಿಸಿದರು. ಮಲಾನ್ ನ್ಯೂಜಿಲೆಂಡ್ ವಿರುದ್ಧ 3 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು.
Published On - 2:32 pm, Mon, 7 November 22