
ಟಿ20 ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್ವೆಲ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅವರ ಭರ್ಜರಿ ದಾಖಲೆ ಮುರಿಯುವ ಮೂಲಕ. ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಮ್ಯಾಕ್ಸ್ವೆಲ್ 36 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ ಅಜೇಯ 62 ರನ್ ಬಾರಿಸಿದ್ದರು.

ಈ ಎರಡು ಸಿಕ್ಸರ್ಗಳೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಚೇಸಿಂಗ್ ವೇಳೆ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ಗ್ಲೆನ್ ಮ್ಯಾಕ್ಸ್ವೆಲ್ ಪಾಲಾಗಿದೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ರೋಹಿತ್ ಶರ್ಮಾ ಅವರ ಹೆಸರಿನಲ್ಲಿತ್ತು.

ರೋಹಿತ್ ಶರ್ಮಾ ಟಿ20 ಪಂದ್ಯದ ಚೇಸಿಂಗ್ ವೇಳೆ 52 ಇನಿಂಗ್ಸ್ಗಳಲ್ಲಿ 63 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಚೇಸಿಂಗ್ ವೇಳೆ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ದಾಂಡಿಗ ಎಂಬ ವಿಶ್ವ ದಾಖಲೆಯನ್ನು ಹಿಟ್ಮ್ಯಾನ್ ತಮ್ಮದಾಗಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಗ್ಲೆನ್ ಮ್ಯಾಕ್ಸ್ವೆಲ್ ಮುರಿದಿದ್ದಾರೆ.

ಆಸ್ಟ್ರೇಲಿಯಾ ಪರ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಗ್ಲೆನ್ ಮ್ಯಾಕ್ಸ್ವೆಲ್ ಚೇಸಿಂಗ್ನಲ್ಲಿ ಈವರೆಗೆ 44 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಬರೋಬ್ಬರಿ 64 ಸಿಕ್ಸ್ ಸಿಡಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಚೇಸಿಂಗ್ನ ಸಿಕ್ಸರ್ ಕಿಂಗ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ ಬಾರಿಸಿದ ಸ್ಫೋಟಕ 62 ರನ್ಗಳ ಇನಿಂಗ್ಸ್ಗಾಗಿ ಗ್ಲೆನ್ ಮ್ಯಾಕ್ಸ್ವೆಲ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಸಹ ಪಡೆದಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾ ಪರ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪಡೆದ ದಾಖಲೆಯನ್ನು ಮ್ಯಾಕ್ಸ್ವೆಲ್ ಸರಿಗಟ್ಟಿದ್ದಾರೆ. ಈ ಪಟ್ಟಿಯಲ್ಲಿ ಇದೀಗ ಡೇವಿಡ್ ವಾರ್ನರ್ ಹಾಗೂ ಮ್ಯಾಕ್ಸ್ವೆಲ್ ತಲಾ 12 ಪಂದ್ಯ ಶ್ರೇಷ್ಠ ಪ್ರಶಸ್ತಿಗಳೊಂದಿಗೆ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ.