ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಗ್ಲೆನ್ ಮ್ಯಾಕ್ಸ್ವೆಲ್ ಹಲವು ದಾಖಲೆಗಳನ್ನು ಬರೆದಿದ್ದಾರೆ. ಅಡಿಲೇಡ್ನಲ್ಲಿ ನಡೆದ ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಕ್ಸ್ವೆಲ್ 55 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 12 ಫೋರ್ಗಳೊಂದಿಗೆ ಅಜೇಯ 120 ರನ್ ಬಾರಿಸಿದ್ದರು.
ಈ ಭರ್ಜರಿ ಶತಕದೊಂದಿಗೆ ಗ್ಲೆನ್ ಮ್ಯಾಕ್ಸ್ವೆಲ್ ಹೆಸರಿಗೆ ಹಲವು ದಾಖಲೆಗಳು ಸೇರ್ಪಡೆಯಾದವು. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.
1- ಶತಕಗಳ ಸರದಾರ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಇದೀಗ ಗ್ಲೆನ್ ಮ್ಯಾಕ್ಸ್ವೆಲ್ ಕೂಡ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದಕ್ಕೂ ಮುನ್ನ 5 ಶತಕ ಸಿಡಿಸಿದ್ದ ರೋಹಿತ್ ಶರ್ಮಾ ಮಾತ್ರ ಮೊದಲ ಸ್ಥಾನದಲ್ಲಿದ್ದರು. ಇದೀಗ ವಿಂಡೀಸ್ ವಿರುದ್ಧ ಶತಕ ಬಾರಿಸುವುದರೊಂದಿಗೆ ಗ್ಲೆನ್ ಮ್ಯಾಕ್ಸ್ವೆಲ್ ಕೂಡ 5 ಸೆಂಚುರಿಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಹಿಟ್ಮ್ಯಾನ್ ಜೊತೆ ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿದ್ದಾರೆ.
2- ಮಿಡಲ್ ಆರ್ಡರ್ ಶೂರ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದು ಅತ್ಯಧಿಕ ಸ್ಕೋರ್ಗಳಿಸಿದ ವಿಶ್ವ ದಾಖಲೆ ಕೂಡ ಗ್ಲೆನ್ ಮ್ಯಾಕ್ಸ್ವೆಲ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿತ್ತು. 2022 ರಲ್ಲಿ ಇಂಗ್ಲೆಂಡ್ ವಿರುದ್ಧ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಸೂರ್ಯ 117 ರನ್ ಬಾರಿಸಿದ್ದರು. ಇದೀಗ ಅಜೇಯ 120 ರನ್ ಸಿಡಿಸುವ ಮೂಲಕ ಗ್ಲೆನ್ ಮ್ಯಾಕ್ಸ್ವೆಲ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
3- ಅತ್ಯಧಿಕ ರನ್: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆ ಕೂಡ ಮ್ಯಾಕ್ಸ್ವೆಲ್ ಪಾಲಾಗಿದೆ. ಆಸೀಸ್ ಪರ ಮಧ್ಯಮ ಕ್ರಮಾಂಕದಲ್ಲಿ 51 ಇನಿಂಗ್ಸ್ ಆಡಿರುವ ಮ್ಯಾಕ್ಸ್ವೆಲ್ ಇದುವರೆಗೆ 1,455 ರನ್ ಗಳಿಸಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್ನಲ್ಲಿ 4ನೇ ಕ್ರಮಾಂಕದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
4- ಟಿ20 ರನ್ ಮೆಷಿನ್: ಈ ಶತಕದೊಂದಿಗೆ ಟಿ20 ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾ ಪರ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ 3ನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಡೇವಿಡ್ ವಾರ್ನರ್ (11,952) ಅಗ್ರಸ್ಥಾನದಲ್ಲಿದ್ದರೆ, ಆರೋನ್ ಫಿಂಚ್ (11,458) ದ್ವಿತೀಯ ಸ್ಥಾನದಲ್ಲಿದ್ದಾರೆ. ಇದೀಗ 9,588 ರನ್ಗಳೊಂದಿಗೆ ಗ್ಲೆನ್ ಮ್ಯಾಕ್ಸ್ವೆಲ್ 3ನೇ ಸ್ಥಾನಕ್ಕೇರಿದ್ದಾರೆ.
5- ಐದು ಶತಕಗಳ ವೀರ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಕಡಿಮೆ ಇನಿಂಗ್ಸ್ಗಳಲ್ಲಿ 5 ಶತಕ ಬಾರಿಸಿದ ವಿಶ್ವ ದಾಖಲೆ ಕೂಡ ಗ್ಲೆನ್ ಮ್ಯಾಕ್ಸ್ವೆಲ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಹಿಟ್ಮ್ಯಾನ್ 143 ಇನಿಂಗ್ಸ್ಗಳಲ್ಲಿ 5 ಶತಕಗಳ ಸಾಧನೆ ಮಾಡಿದ್ದರು. ಇದೀಗ ಕೇವಲ 94 ಟಿ20 ಇನಿಂಗ್ಸ್ಗಳ ಮೂಲಕ ಗ್ಲೆನ್ ಮ್ಯಾಕ್ಸ್ವೆಲ್ 5 ಶತಕಗಳನ್ನು ಪೂರೈಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತೀ ಕಡಿಮೆ ಇನಿಂಗ್ಸ್ನಲ್ಲಿ 5 ಸೆಂಚುರಿ ಸಿಡಿಸಿದ ಸರದಾರ ಎನಿಸಿಕೊಂಡಿದ್ದಾರೆ.
Published On - 8:23 am, Mon, 12 February 24