Updated on: Oct 29, 2022 | 5:30 PM
ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ಟಿ20 ವಿಶ್ವಕಪ್ನ 27ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಆಟಗಾರ ಗ್ಲೆನ್ ಫಿಲಿಪ್ಸ್ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಶ್ರೀಲಂಕಾ ವಿರುದ್ಧ ನಡೆದ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಉತ್ತಮ ಆರಂಭ ಪಡೆದಿರಲಿಲ್ಲ.
ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಫಿಲಿಪ್ಸ್ ಲಂಕಾ ಬೌಲರ್ಗಳ ಬೆಂಡೆತ್ತಿದರು. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದ ಫಿಲಿಪ್ಸ್ 61 ಎಸೆತಗಳಲ್ಲಿ ಶತಕ ಪೂರೈಸಿದರು.
ಅಲ್ಲದೆ 64 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 10 ಫೋರ್ನೊಂದಿಗೆ 104 ರನ್ ಬಾರಿಸಿ ಔಟಾದರು. ವಿಶೇಷ ಎಂದರೆ ಶತಕದೊಂದಿಗೆ ಫಿಲಿಪ್ಸ್ ಹಲವು ದಾಖಲೆಗಳನ್ನು ಕೂಡ ನಿರ್ಮಿಸಿದ್ದಾರೆ.
ಟಿ20 ವಿಶ್ವಕಪ್ ಇತಿಹಾಸದಲ್ಲೇ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಬಾರಿಸಿದ ಮೊದಲ ಬ್ಯಾಟ್ಸ್ಮನ್ ಎಂಬ ವಿಶ್ವ ದಾಖಲೆ ಇದೀಗ ಗ್ಲೆನ್ ಫಿಲಿಪ್ಸ್ ಪಾಲಾಗಿದೆ.
ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ಪರ ಟಿ20 ವಿಶ್ವಕಪ್ನಲ್ಲಿ ಶತಕ ಬಾರಿಸಿದ 2ನೇ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಬ್ರೆಂಡನ್ ಮೆಕಲಂ (123) 2012 ರಲ್ಲಿ ಬಾಂಗ್ಲಾದೇಶ್ ವಿರುದ್ಧ ಶತಕ ಬಾರಿಸಿದ್ದರು.
ವಿಶೇಷ ಎಂದರೆ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಕಲೆಹಾಕಿರುವುದು 167 ರನ್ಗಳು. ಅಂದರೆ ಇಡೀ ತಂಡದ ಬಹುಭಾಗ ಸ್ಕೋರ್ ಅನ್ನು ಗ್ಲೆನ್ ಫಿಲಿಪ್ಸ್ (104) ಒಬ್ಬರೇ ಕಲೆಹಾಕಿದ್ದರು.
ಹಾಗೆಯೇ ಟಿ20 ವಿಶ್ವಕಪ್ನಲ್ಲಿ ಶತಕ ಬಾರಿಸಿದ ವಿಶ್ವದ 11ನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ಗ್ಲೆನ್ ಫಿಲಿಪ್ಸ್ ಪಾತ್ರರಾಗಿದ್ದಾರೆ. ಒಟ್ಟಿನಲ್ಲಿ ಭರ್ಜರಿ ಶತಕದ ಮೂಲಕ ಫಿಲಿಪ್ಸ್ ಇದೀಗ ಇಡೀ ವಿಶ್ವದ ಗಮನ ಸೆಳೆದಿದ್ದಾರೆ.