ಸ್ಫೋಟಕ ಸೆಂಚುರಿಯೊಂದಿಗೆ ದಾಖಲೆಗಳ ಮೇಲೆ ದಾಖಲೆ ಬರೆದ ಹರ್ಮನ್ಪ್ರೀತ್ ಕೌರ್
England Women vs India Women: ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಮಹಿಳಾ ತಂಡದ ಪರ ನಾಯಕಿ ಹರ್ಮನ್ಪ್ರೀತ್ ಕೌರ್ ಭರ್ಜರಿ ಸೆಂಚುರಿ ಸಿಡಿಸಿದ್ದರು. ಈ ಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ 50 ಓವರ್ಗಳಲ್ಲಿ 318 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 305 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 13 ರನ್ಗಳ ಜಯ ಸಾಧಿಸಿ, ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ.
Updated on: Jul 23, 2025 | 9:23 AM

ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ (Harmanpreet Kaur) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಚೆಸ್ಟರ್-ಲೆ-ಸ್ಟ್ರೀಟ್ನ ರಿವರ್ಸೈಡ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತದ ಪರ ಹರ್ಮನ್ಪ್ರೀತ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು.

ಕ್ರೀಸ್ಗೆ ಆಗಮಿಸುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಹರ್ಮನ್ಪ್ರೀತ್ ಕೌರ್ ಮೈದಾನದ ಮೂಲೆ ಮೂಲೆಗೂ ಫೋರ್ಗಳನ್ನು ಬಾರಿಸಿದರು. ಈ ಮೂಲಕ ಕೇವಲ 82 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಹರ್ಮನ್ಪ್ರೀತ್ ಏಕದಿನ ಕ್ರಿಕೆಟ್ನಲ್ಲಿ 4000 ಸಾವಿರ ರನ್ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ ಮೂರನೇ ಮಹಿಳಾ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಮಿಥಾಲಿ ರಾಜ್ ಹಾಗೂ ಸ್ಮೃತಿ ಮಂಧಾನ ಈ ಸಾಧನೆ ಮಾಡಿದ್ದರು.

ಅಲ್ಲದೆ ಈ ಶತಕದೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಇಂಗ್ಲೆಂಡ್ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮೆಗ್ ಲ್ಯಾನಿಂಗ್ ಹಾಗೂ ಭಾರತದ ಮಿಥಾಲಿ ರಾಜ್ ಅಗ್ರಸ್ಥಾನದಲ್ಲಿದ್ದರು. ಈ ಇಬ್ಬರು ಆಂಗ್ಲರ ನಾಡಿನಲ್ಲಿ ತಲಾ 2 ಏಕದಿನ ಶತಕ ಸಿಡಿಸಿದ್ದರು. ಇದೀಗ ಮೂರನೇ ಶತಕದೊಂದಿಗೆ ಹರ್ಮನ್ಪ್ರೀತ್ ಕೌರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಹಾಗೆಯೇ ಭಾರತದ ಪರ ಏಕದಿನ ಕ್ರಿಕೆಟ್ನಲ್ಲಿ 90 ಕ್ಕಿಂತ ಕಡಿಮೆ ಎಸೆತಗಳಲ್ಲಿ ಅತ್ಯಧಿಕ ಶತಕ ಸಿಡಿಸಿ ಮಹಿಳಾ ಆಟಗಾರ್ತಿ ಎಂಬ ದಾಖಲೆ ಸಹ ಹರ್ಮನ್ಪ್ರೀತ್ ಕೌರ್ ಪಾಲಾಗಿದೆ. 2024 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಹರ್ಮನ್ಪ್ರೀತ್ ಕೇವಲ 85 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಇದೀಗ 82 ಎಸೆತಗಳಲ್ಲಿ ಶತಕ ಪೂರೈಸಿ ಈ ವಿಶೇಷ ದಾಖಲೆ ಬರೆದಿದ್ದಾರೆ.

ಹಾಗೆಯೇ ಇಂಗ್ಲೆಂಡ್ನಲ್ಲಿ ಏಕದಿನ ಕ್ರಿಕೆಟ್ನಲ್ಲಿ 1000 ರನ್ ಕಲೆಹಾಕಿದ ಟೀಮ್ ಇಂಡಿಯಾದ 2ನೇ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಹರ್ಮನ್ಪ್ರೀತ್ ಕೌರ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಮಿಥಾಲಿ ರಾಜ್ ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧ 84 ಎಸೆತಗಳಲ್ಲಿ 14 ಫೋರ್ಗಳೊಂದಿಗೆ 102 ರನ್ ಬಾರಿಸುವ ಮೂಲಕ ಹರ್ಮನ್ಪ್ರೀತ್ ಕೌರ್ ಕೂಡ ಆಂಗ್ಲರ ನಾಡಿನಲ್ಲಿ 1000 ರನ್ ಪೂರೈಸಿದ್ದಾರೆ.
