ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಶತಕ ಬಾರಿಸುವ ಮೂಲಕ ಇಂಗ್ಲೆಂಡ್ ಬ್ಯಾಟರ್ ಹ್ಯಾರಿ ಬ್ರೂಕ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಕ್ರಿಕೆಟ್ ದಂತಕಥೆ ಡಾನ್ ಬ್ರಾಡ್ಮನ್ ಹೆಸರಿನಲ್ಲಿದ್ದ ವರ್ಲ್ಡ್ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ.
ವೆಲ್ಲಿಂಗ್ಟನ್ನಲ್ಲಿ ನಡೆದ ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬ್ರೂಕ್ ಸ್ಪೋಟಕ ಇನಿಂಗ್ಸ್ ಆಡಿದ್ದರು. ಬಿರುಸಿನ ಬ್ಯಾಟಿಂಗ್ನೊಂದಿಗೆ ಕಿವೀಸ್ ವೇಗಿಗಳ ಬೆಂಡೆತ್ತಿದ ಬ್ರೂಕ್ 115 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ 123 ರನ್ ಬಾರಿಸಿದ್ದರು.
ಈ ಭರ್ಜರಿ ಸೆಂಚುರಿಯೊಂದಿಗೆ ಮೊದಲ 10 ವಿದೇಶಿ ಟೆಸ್ಟ್ ಪಂದ್ಯಗಳಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆ ಹ್ಯಾರಿ ಬ್ರೂಕ್ ಪಾಲಾಗಿದೆ. ಇದಕ್ಕೂ ಮುನ್ನ ಈ ಸರ್ವಶ್ರೇಷ್ಠ ದಾಖಲೆ ಡಾನ್ ಬ್ರಾಡ್ಮನ್ ಹೆಸರಿನಲ್ಲಿತ್ತು.
ಆಸ್ಟ್ರೇಲಿಯಾದ ಮಾಜಿ ದಂತಕಥೆ ಡಾನ್ ಬ್ರಾಡ್ಮನ್ ತಮ್ಮ ಮೊದಲ 10 ವಿದೇಶಿ ಟೆಸ್ಟ್ ಪಂದ್ಯಗಳಲ್ಲಿ 6 ಶತಕ ಬಾರಿಸಿ ವಿಶ್ವ ದಾಖಲೆ ಬರೆದಿದ್ದರು. ಈ ವರ್ಲ್ಡ್ ರೆಕಾರ್ಡ್ ಅನ್ನು ಮುರಿಯಲು ಯಾರಿಂದಲೂ ಸಾಧ್ಯವಾಗಿರಲಿಲ್ಲ.
ಇದೀಗ ವಿದೇಶದಲ್ಲಿ ಆಡಿದ ಮೊದಲ 10 ಟೆಸ್ಟ್ ಪಂದ್ಯಗಳಲ್ಲಿ 25 ವರ್ಷದ ಹ್ಯಾರಿ ಬ್ರೂಕ್ 7 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮೊದಲ 10 ವಿದೇಶಿ ಟೆಸ್ಟ್ ಪಂದ್ಯಗಳಲ್ಲಿ ಅತ್ಯಧಿಕ ಸೆಂಚುರಿ ಬಾರಿಸಿದ ವಿಶ್ವ ದಾಖಲೆಯನ್ನು ಬ್ರೂಕ್ ತಮ್ಮದಾಗಿಸಿಕೊಂಡಿದ್ದಾರೆ.