
ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದೆ. ಮೊದಲ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ, ಟೀಂ ಇಂಡಿಯಾ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಿದೆ. ಇದೀಗ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯ ಜೂನ್ 20 ರಂದು ಚೆನ್ನೈನ ಐತಿಹಾಸಿಕ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈ ಪಂದ್ಯಕ್ಕೂ ಮುನ್ನ ಯುವ ವೇಗಿ ಹರ್ಷಿತ್ ರಾಣಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ಪ್ರಕಟಿಸಿದೆ. ಗಾಯದಿಂದಾಗಿ ಕ್ರಿಕೆಟ್ನಿಂದ ದೂರ ಉಳಿದಿದ್ದ ಹರ್ಷಿತ್, ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ಪುನರ್ವಸತಿಗೆ ಒಳಗಾಗಿದ್ದರು. ಗಾಯದಿಂದ ಚೇತರಿಸಿಕೊಂಡ ನಂತರ ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹರ್ಷಿತ್, ಚೆನ್ನೈನಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ.

ವಾಸ್ತವವಾಗಿ ಗಾಯದಿಂದಾಗಿ ಹರ್ಷಿತ್ ರಾಣಾ ಜನವರಿ 2026 ರಿಂದ ಯಾವುದೇ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ ಎಂಬುದು ಗಮನಿಸಬೇಕಾದ ಸಂಗತಿ. ಗಾಯದಿಂದಾಗಿ ಅವರು 2026 ರ ಐಪಿಎಲ್ ಅನ್ನು ಸಹ ತಪ್ಪಿಸಿಕೊಂಡಿದ್ದರು. ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಹರ್ಷಿತ್, ಅಫ್ಘಾನಿಸ್ತಾನ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಡುವ ಸಾಧ್ಯತೆಗಳಿವೆ.

ಅಲ್ಲದೆ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಿಗೆ ಭಾರತ ಟಿ20 ತಂಡದಲ್ಲೂ ಹರ್ಷಿತ್ ರಾಣಾ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಮುಖ ಸರಣಿಗೂ ಮುಂಚಿತವಾಗಿ ಹರ್ಷಿತ್ ತಮ್ಮ ಲಯ ಕಂಡುಕೊಳ್ಳಲು ಇದು ಉತ್ತಮ ಅವಕಾಶವಾಗಿದೆ. ರಾಣಾ ಇದುವರೆಗೆ ಟೀಂ ಇಂಡಿಯಾ ಪರ 14 ಏಕದಿನ ಪಂದ್ಯಗಳನ್ನು ಆಡಿದ್ದು, ಒಟ್ಟು 26 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಮೂರನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ, ಯಶಸ್ವಿ ಜೈಸ್ವಾಲ್, ಹರ್ಷಿತ್ ರಾಣಾ.