ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಅಫ್ಘಾನಿಸ್ತಾನ್ ಆಟಗಾರ ಇಬ್ರಾಹಿಂ ಝದ್ರಾನ್ ಹಲವು ದಾಖಲೆಗಳನ್ನು ಬರೆದಿದ್ದಾರೆ. ಆ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಇಬ್ರಾಹಿಂ ಝದ್ರಾನ್ 143 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ ಅಜೇಯ 129 ರನ್ ಬಾರಿಸಿದ್ದರು. ಈ ಶತಕದೊಂದಿಗೆ ಏಕದಿನ ವಿಶ್ವಕಪ್ನಲ್ಲಿ ಅಫ್ಘಾನಿಸ್ತಾನ್ ಪರ ಸೆಂಚುರಿ ಸಿಡಿಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಬರೆದರು.
ಇದರೊಂದಿಗೆ ಏಕದಿನ ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಇಬ್ರಾಹಿಂ ಝದ್ರಾನ್ ತಮ್ಮ 21ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದಾರೆ.
ಅಷ್ಟೇ ಅಲ್ಲದೆ ಏಕದಿನ ವಿಶ್ವಕಪ್ನಲ್ಲಿ ಶತಕ ಬಾರಿಸಿದ ನಾಲ್ಕನೇ ಕಿರಿಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ಇಬ್ರಾಹಿಂ ಝದ್ರಾನ್ ಪಾತ್ರರಾಗಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.
2011ರ ಏಕದಿನ ವಿಶ್ವಕಪ್ನಲ್ಲಿ 22 ವರ್ಷದ ವಿರಾಟ್ ಕೊಹ್ಲಿ ಬಾಂಗ್ಲಾದೇಶ್ ವಿರುದ್ಧ ಶತಕ ಬಾರಿಸಿದ್ದರು. ಈ ಮೂಲಕ ವರ್ಲ್ಡ್ಕಪ್ನಲ್ಲಿ ಸೆಂಚುರಿ ಸಿಡಿಸಿದ 4ನೇ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದರು.
ಇದೀಗ 21ನೇ ವಯಸ್ಸಿನಲ್ಲಿ ಶತಕದ ಸಾಧನೆ ಮಾಡುವ ಮೂಲಕ ಇಬ್ರಾಹಿಂ ಝದ್ರಾನ್ ಈ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಐರ್ಲೆಂಡ್ನ ಪೌಲ್ ಸ್ಟೀರ್ಲಿಂಗ್.
2011 ರ ವಿಶ್ವಕಪ್ನಲ್ಲಿ ನೆದರ್ಲೆಂಡ್ಸ್ ವಿರುದ್ಧ 20 ವರ್ಷದ ಪೌಲ್ ಸ್ಟಿರ್ಲಿಂಗ್ ಭರ್ಜರಿ ಶತಕ ಸಿಡಿಸಿ ದಾಖಲೆ ಬರೆದಿದ್ದರು. ಇದೀಗ 21ನೇ ವಯಸ್ಸಿನಲ್ಲಿ ಚೊಚ್ಚಲ ವಿಶ್ವಕಪ್ ಶತಕ ಸಿಡಿಸುವ ಮೂಲಕ ಇಬ್ರಾಹಿಂ ಝದ್ರಾನ್ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಿರುವುದು ವಿಶೇಷ.
ಇನ್ನು ಇಬ್ರಾಹಿಂ ಝದ್ರಾನ್ ಅವರ ಅಜೇಯ 129 ರನ್ಗಳ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧ ಅಫ್ಘಾನಿಸ್ತಾನ್ ತಂಡವು 5 ವಿಕೆಟ್ ನಷ್ಟಕ್ಕೆ 291 ರನ್ ಕಲೆಹಾಕಿದೆ.