
ಐಸಿಸಿ ಏಕದಿನ ಬ್ಯಾಟರ್ಗಳ ನೂತನ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಅಗ್ರಸ್ಥಾನ ಅಲಂಕರಿಸಿರುವುದು ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್. ಆದರೆ ದ್ವಿತೀಯ ಸ್ಥಾನದಲ್ಲಿ ಅಫ್ಘಾನಿಸ್ತಾನ್ ತಂಡದ ಆರಂಭಿಕ ದಾಂಡಿಗ ಇಬ್ರಾಹಿಂ ಝದ್ರಾನ್ ಕಾಣಿಸಿಕೊಂಡಿದ್ದಾರೆ.

ಕಳೆದ ಬಾರಿ ಶ್ರೇಯಾಂಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದ ಇಬ್ರಾಹಿಂ ಝದ್ರಾನ್ ಇದೀಗ ಎರಡನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಅದು ಸಹ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ದಿಗ್ಗಜರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ನೂತನ ಏಕದಿನ ಬ್ಯಾಟರ್ಗಳ ಟಾಪ್-5 ಪಟ್ಟಿ ಈ ಕೆಳಗಿನಂತಿದೆ...

ಶುಭ್ಮನ್ ಗಿಲ್: ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಪ್ರದರ್ಶನದೊಂದಿಗೆ ಅಗ್ರಸ್ಥಾನಕ್ಕೇರಿರುವ ಗಿಲ್ 784 ಅಂಕಗಳೊಂದಿಗೆ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇಬ್ರಾಹಿಂ ಝದ್ರಾನ್: ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯಲ್ಲಿ ಇಬ್ರಾಹಿಂ ಝದ್ರಾನ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ 8 ಸ್ಥಾನ ಮೇಲೇರುವ ಮೂಲಕ 764 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

ರೋಹಿತ್ ಶರ್ಮಾ: ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಪರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದ ರೋಹಿತ್ ಶರ್ಮಾ ನೂತನ ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು. ಹಿಟ್ಮ್ಯಾನ್ ಒಟ್ಟು 756 ಅಂಕಗಳನ್ನು ಹೊಂದಿದ್ದಾರೆ.

ಬಾಬರ್ ಆಝಂ: ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದಾರೆ. ಈ ಮೂಲಕ 739 ಅಂಕಗಳೊಂದಿಗೆ ಏಕದಿನ ಬ್ಯಾಟರ್ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಅಲಂಕರಿಸಿದ್ದಾರೆ.

ವಿರಾಟ್ ಕೊಹ್ಲಿ: ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊನೆಯ ಏಕದಿನ ಪಂದ್ಯವಾಡಿದ್ದ ವಿರಾಟ್ ಕೊಹ್ಲಿ ಈ ಬಾರಿ ಐದನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ಒಟ್ಟು 736 ಅಂಕಗಳನ್ನು ಹೊಂದಿದ್ದು, ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಮಿಂಚಿದರೆ ಟಾಪ್-3 ಗೆ ಎಂಟ್ರಿ ಕೊಡಬಹುದು.
Published On - 10:54 am, Thu, 16 October 25