ICC ODI Rankings: ಐಸಿಸಿ ಏಕದಿನ ಬ್ಯಾಟರ್ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಟಾಪ್-10 ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್ಗಳು ಇರುವುದು ವಿಶೇಷ. ಅದರಲ್ಲೂ ಈ ನಾಲ್ವರಲ್ಲಿ ಮೂವರು ಅಗ್ರ-5 ರಲ್ಲಿ ಕಾಣಿಸಿಕೊಂಡಿದ್ದಾರೆ.
ಐಸಿಸಿ ಒಡಿಐ ಬ್ಯಾಟರ್ಗಳ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್ಮನ್ ಗಿಲ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಗಿಲ್ ಒಟ್ಟು 791 ಅಂಕಗಳೊಂದಿಗೆ ಅಗ್ರಾಸ್ಥಾನ ಕಾಯ್ದುಕೊಂಡಿದ್ದಾರೆ.
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಪಾಕಿಸ್ತಾನ್ ತಂಡದ ಬ್ಯಾಟರ್ ಬಾಬರ್ ಆಝಂ. ಚಾಂಪಿಯನ್ಸ್ ಟ್ರೋಫಿಯಲ್ಲಿನ ಕಳಪೆ ಪ್ರದರ್ಶನದ ಹೊರತಾಗಿಯೂ ಬಾಬರ್ ಒಟ್ಟು 770 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಬಾರಿ ಐದನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಹಿಟ್ಮ್ಯಾನ್ ಒಟ್ಟು 745 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದರೆ, ಐರ್ಲೆಂಡ್ನ ಹ್ಯಾರಿ ಟೆಕ್ಟರ್ 713 ಅಂಕಗಳೊಂದಿಗೆ ಆರನೇ ಸ್ಥಾನ ಪಡೆದಿದ್ದಾರೆ. ಹಾಗೆಯೇ ನ್ಯೂಝಿಲೆಂಡ್ನ ಡೇರಿಲ್ ಮಿಚೆಲ್ (705) ಏಳನೇ ಸ್ಥಾನ ಅಲಂಕರಿಸಿದ್ದಾರೆ.
ಸೌತ್ ಆಫ್ರಿಕಾದ ಹೆನ್ರಿಕ್ ಕ್ಲಾಸೆನ್ (760) ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಪಾಕಿಸ್ತಾನ್ ವಿರುದ್ಧ ಭರ್ಜರಿ ಶತಕ ಹಾಗೂ ಆಸ್ಟ್ರೇಲಿಯಾ ವಿರುದ್ಧ ಅರ್ಧಶತಕ ಸಿಡಿಸಿ ಮಿಂಚಿರುವ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ಒಟ್ಟು 747 ಅಂಕಗಳನ್ನು ಹೊಂದಿದ್ದಾರೆ.
ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ 702 ಅಂಕಗಳೊಂದಿಗೆ 8ನೇ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ಶ್ರೀಲಂಕಾದ ಚರಿತ್ ಅಸಲಂಕಾ (694) ಹಾಗೂ ಅಫ್ಘಾನಿಸ್ತಾನದ ಇಬ್ರಾಹಿಂ ಝದ್ರಾನ್ (676) ಕ್ರಮವಾಗಿ 9ನೇ ಮತ್ತು 10ನೇ ಸ್ಥಾನದಲ್ಲಿದ್ದಾರೆ.