ಪ್ರಸ್ತುತ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಟೀಂ ಇಂಡಿಯಾ ಪರ ಬೌಲಿಂಗ್ನಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ, ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನಕ್ಕೇರಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಬುಮ್ರಾ ಪ್ರದರ್ಶನ ಅದ್ಭುತವಾಗಿದೆ. ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ 2 ವಿಕೆಟ್ ಕಬಳಿಸಿದ್ದ ಬುಮ್ರಾ, ಎರಡನೇ ಇನ್ನಿಂಗ್ಸ್ನಲ್ಲಿ 4 ವಿಕೆಟ್ ಪಡೆದು ಮಿಂಚಿದ್ದರು.
ಹಾಗೆಯೇ ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲೂ ತಮ್ಮ ಅದ್ಭುತ ಫಾರ್ಮ್ ಮುಂದುವರೆಸಿದ್ದ ಬುಮ್ರಾ ಮೊದಲ ಇನ್ನಿಂಗ್ಸ್ನಲ್ಲಿ 6 ವಿಕೆಟ್ ಕಬಳಿಸಿದ್ದರೆ, ಎರಡನೇ ಇನ್ನಿಂಗ್ಸ್ನಲ್ಲಿ 3 ವಿಕೆಟ್ ಪಡೆದು ತಂಡದ ಗೆಲುವಿನ ಪ್ರಮುಖ ರೂವಾರಿ ಎನಿಸಿಕೊಂಡಿದ್ದರು. ಅಲ್ಲದೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದರು.
ಈ ಅಮೋಘ ಪ್ರದರ್ಶನ ಲಾಭ ಪಡೆದಿರುವ ಬುಮ್ರಾ, ನೂತನ ಟೆಸ್ಟ್ ರ್ಯಾಂಕಿಂಗ್ನಲ್ಲಿ ಮೂರು ಸ್ಥಾನ ಮೇಲೇರಿ 881 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದ್ದಾರೆ. ಇದರೊಂದಿಗೆ ಬುಮ್ರಾ ಕ್ರಿಕೆಟ್ನ ಮೂರು ಮಾದರಿಯಲ್ಲೂ ಅಗ್ರಸ್ಥಾನಕ್ಕೇರಿದ ವಿಶ್ವದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.
ವಾಸ್ತವವಾಗಿ ಬುಮ್ರಾ ಟೆಸ್ಟ್‌ನಲ್ಲಿ ನಂಬರ್ ಒನ್ ಬೌಲರ್ ಆಗಿದ್ದು ಇದೇ ಮೊದಲು. ಇದಕ್ಕೂ ಮುನ್ನ ಅವರು ಏಕದಿನ ಮತ್ತು ಟಿ20ಯಲ್ಲಿ ಈ ಸಾಧನೆ ಮಾಡಿದ್ದರು. ಇದರೊಂದಿಗೆ ಬುಮ್ರಾ, ವಿರಾಟ್ ಕೊಹ್ಲಿ ನಂತರ ಎಲ್ಲಾ ಮೂರು ಮಾದರಿಗಳಲ್ಲಿ ನಂಬರ್-1 ಆದ ಏಷ್ಯಾದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ.
ಇದೀಗ ಜಸ್ಪ್ರೀತ್ ಬುಮ್ರಾ ಮೊದಲ ಸ್ಥಾನಕ್ಕೇರಿರುವುದರ ಪರಿಣಾಮ ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಆರ್ ಅಶ್ವಿನ್ ಮೊದಲ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಇಂಗ್ಲೆಂಡ್ ವಿರುದ್ಧ ಇದುವರೆಗೆ 9 ವಿಕೆಟ್ ಕಬಳಿಸಿರುವ ಅಶ್ವಿನ್ 841 ರೇಟಿಂಗ್ನೊಂದಿಗೆ ಎರಡು ಸ್ಥಾನ ಕಳೆದುಕೊಂಡಿದ್ದಾರೆ.
ಉಳಿದಂತೆ ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದರೆ, ಮತ್ತೊಂದೆಡೆ, ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಹಾಗೆಯೇ ಗಾಯದ ಸಮಸ್ಯೆಯಿಂದ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡದ ರವೀಂದ್ರ ಜಡೇಜಾ ಕೂಡ 8 ನೇ ಸ್ಥಾನಕ್ಕೆ ಕುಸಿದಿದ್ದಾರೆ.
Published On - 2:08 pm, Wed, 7 February 24