
ಫೆಬ್ರವರಿ 17 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ಶುರುವಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಏಕೆಂದರೆ ತಂಡಕ್ಕೆ ಪ್ರಮುಖ ಆಟಗಾರ ಶ್ರೇಯಸ್ ಅಯ್ಯರ್ ಮರಳಿದ್ದಾರೆ. ಬೆನ್ನು ನೋವಿನ ಕಾರಣ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಅಯ್ಯರ್, ತಂಡವನ್ನು ಕೂಡಿಕೊಂಡಿರುವುದರಿಂದ ಆಡುವ ಬಳಗದಿಂದ ಓರ್ವ ಆಟಗಾರ ಹೊರಬೀಳಬಹುದು.

ಅದರಂತೆ ಮೊದಲ ಟೆಸ್ಟ್ ಪಂದ್ಯದಲ್ಲಿ ಅವಕಾಶ ಪಡೆದಿದ್ದ ಸೂರ್ಯಕುಮಾರ್ ಯಾದವ್ ಪ್ಲೇಯಿಂಗ್ ಇಲೆವೆನ್ನಿಂದ ಹೊರಬೀಳುವ ಸಾಧ್ಯತೆ ಹೆಚ್ಚಿದೆ. ಅಂದರೆ ಶ್ರೇಯಸ್ ಅಯ್ಯರ್ ಸ್ಥಾನದಲ್ಲಿ ನಾಗ್ಪುರ ಟೆಸ್ಟ್ನಲ್ಲಿ ಸೂರ್ಯಕುಮಾರ್ ಅವಕಾಶ ಪಡೆದಿದ್ದರು. ಮೊದಲ ಇನಿಂಗ್ಸ್ನಲ್ಲಿ ಬ್ಯಾಟ್ ಬೀಸಿದ್ದ ಸೂರ್ಯ ಕೇವಲ 8 ರನ್ಗಳಿಸಿ ಕ್ಲೀನ್ ಬೌಲ್ಡ್ ಆಗಿದ್ದರು.

ಹೀಗಾಗಿ ಮಧ್ಯಮ ಕ್ರಮಾಂಕವನ್ನು ಮತ್ತಷ್ಟು ಬಲಪಡಿಸಲು ಶ್ರೇಯಸ್ ಅಯ್ಯರ್ಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಚಾನ್ಸ್ ನೀಡಬಹುದು. ಈಗಾಗಲೇ ಟೀಮ್ ಇಂಡಿಯಾ ಪರ 7 ಟೆಸ್ಟ್ ಪಂದ್ಯಗಳನ್ನು ಆಡಿರುವ ಶ್ರೇಯಸ್ ಅಯ್ಯರ್ 65ರ ಸರಾಸರಿಯಲ್ಲಿ ಒಟ್ಟು 624 ರನ್ ಕಲೆಹಾಕಿದ್ದಾರೆ.

ಈ ವೇಳೆ 1 ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹೀಗಾಗಿ ದೆಹಲಿ ಟೆಸ್ಟ್ನಲ್ಲಿ ಅಯ್ಯರ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

ಭಾರತ ಟೆಸ್ಟ್ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್.