
ಭಾರತ-ಆಸ್ಟ್ರೇಲಿಯಾ ನಡುವಣ 4 ಪಂದ್ಯಗಳ ಟೆಸ್ಟ್ ಸರಣಿಯು ಕುತೂಹಲಘಟ್ಟಕ್ಕೆ ಬಂದು ನಿಂತಿದೆ. ಮೊದಲೆರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ, ಇಂದೋರ್ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದುಕೊಂಡಿದೆ. ಇದರೊಂದಿಗೆ ಸರಣಿಯು 2-1 ಅಂತರಕ್ಕೆ ಬಂದು ನಿಂತಿದೆ.

ಇದೀಗ ಟೀಮ್ ಇಂಡಿಯಾಗೆ ಸರಣಿ ಗೆಲ್ಲಲು ಕೊನೆಯ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕು ಅಥವಾ ಡ್ರಾ ಮಾಡಿಕೊಳ್ಳಬೇಕು. ಮತ್ತೊಂದೆಡೆ ಸರಣಿ ಸೋಲಿನಿಂದ ಪಾರಾಗಲು ಅಂತಿಮ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ ಆಸ್ಟ್ರೇಲಿಯಾ. ಹೀಗಾಗಿ ಅಹಮದಾಬಾದ್ನಲ್ಲಿ ನಡೆಯಲಿರುವ 4ನೇ ಟೆಸ್ಟ್ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ.

ವಿಶೇಷ ಎಂದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಲಭ್ಯರಿರಲಿದ್ದಾರೆ. ದೆಹಲಿ ಹಾಗೂ ನಾಗ್ಪುರ ಟೆಸ್ಟ್ ಪಂದ್ಯಗಳಲ್ಲಿ ಶಮಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ನ ಭಾಗವಾಗಿದ್ದರು. ಆದರೆ 3ನೇ ಟೆಸ್ಟ್ ಪಂದ್ಯದ ವೇಳೆ ಶಮಿಗೆ ವಿಶ್ರಾಂತಿ ನೀಡಲಾಗಿತ್ತು.

ಇದೀಗ ನಿರ್ಣಾಯಕ ಪಂದ್ಯವಾಗಿರುವ ಕಾರಣ ಮೊಹಮ್ಮದ್ ಶಮಿ ಅವರನ್ನು ಮತ್ತೆ ಕಣಕ್ಕಿಳಿಸಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಹೀಗಾಗಿ ಅಹಮದಾಬಾದ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ ಎನ್ನಬಹುದು.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.