
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಗೆಲುವು ದಾಖಲಿಸಿತ್ತು. ಈ ಗೆಲುವಿನ ಬೆನ್ನಲ್ಲೇ ಪ್ರಮುಖ ಆಟಗಾರ ಶ್ರೇಯಸ್ ಅಯ್ಯರ್ ಭಾರತ ತಂಡದಿಂದ ಹೊರಬಿದ್ದಿದ್ದಾರೆ. ಅದು ಸಹ ಮೂರು ವಾರಗಳ ಕಾಲ.

ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದ ವೇಳೆ ಕ್ಯಾಚ್ ಹಿಡಿಯುವಾಗ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅಲ್ಲದೆ ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದೀಗ ಶ್ರೇಯಸ್ ಅಯ್ಯರ್ ಅವರ ವೈದ್ಯಕೀಯ ವರದಿಗಳು ಬಂದಿದ್ದು, ಈ ವರದಿಯಲ್ಲಿ ಹೆಚ್ಚಿನ ಚಿಕಿತ್ಸೆಯ ಅಗತ್ಯತೆಯನ್ನು ಸೂಚಿಸಲಾಗಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಶ್ರೇಯಸ್ ಅಯ್ಯರ್ ಅವರ ಎಡ ಪಕ್ಕೆಲುಬಿಗೆ ಗಂಭೀರ ಗಾಯವಾಗಿದೆ. ಹೀಗಾಗಿ ಮೂರು ವಾರಗಳ ಕಾಲ ಮೈದಾನದಿಂದ ಹೊರಗುಳಿಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಶ್ರೇಯಸ್ ಅಯ್ಯರ್ ಶೀಘ್ರದಲ್ಲೇ ಚಿಕಿತ್ಸೆಗೆ ಒಳಗಾಗಲಿದ್ದಾರೆ.

ಅತ್ತ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಶ್ರೇಯಸ್ ಅಯ್ಯರ್ ಆಯ್ಕೆಯಾಗಿಲ್ಲ. ಇದಾಗ್ಯೂ ಈ ಸರಣಿಯ ಬಳಿಕ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ ಟೆಸ್ಟ್ ಹಾಗೂ ಏಕದಿನ ಸರಣಿ ಆಡಬೇಕಿದೆ. ಅದಕ್ಕೂ ಮುನ್ನ ಸಂಪೂರ್ಣ ಫಿಟ್ನೆಸ್ನೊಂದಿಗೆ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳುವುದನ್ನು ಎದುರು ನೋಡಬಹುದು.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.