
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟಿ20 ಸರಣಿ ಇಂದಿನಿಂದ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯ ಕ್ಯಾನ್‌ಬೆರಾದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಪ್ರಸ್ತುತ ಉತ್ತಮ ಸ್ಥಿತಿಯಲಿದೆ. ಆದರೆ ಈ ಪಂದ್ಯದ ನಡುವೆ ತಂಡಕ್ಕೆ ಆಘಾತಕ್ಕಾರಿ ಸುದ್ದಿಯೊಂದು ಎದುರಾಗಿದೆ.

ವಾಸ್ತವವಾಗಿ ಐದು ಪಂದ್ಯಗಳ ಟಿ20 ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಇಂಜುರಿಗೆ ತುತ್ತಾಗಿದ್ದಾರೆ. ಹೀಗಾಗಿ ಅವರನ್ನು ಸರಣಿಯ ಮೊದಲ ಮೂರು ಪಂದ್ಯಗಳಿಂದ ಹೊರಗಿಡಲಾಗಿದೆ. ಈ ಬಗ್ಗೆ ಸ್ವತಃ ಬಿಸಿಸಿಐ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ತಂಡದ ಸ್ಟಾರ್ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಗಾಯದಿಂದ ಬಳಲುತ್ತಿದ್ದು ಅವರನ್ನು ಮೊದಲ 3 ಪಂದ್ಯಗಳಿಂದ ಹೊರಗಿಡಲಾಗಿದೆ. ವಾಸ್ತವವಾಗಿ ಉಭಯ ತಂಡಗಳ ನಡುವೆ ನಡೆದ ಏಕದಿನ ಸರಣಿಯ ಕೊನೆಯ ಪಂದ್ಯಕ್ಕೂ ಮುನ್ನ ನಿತೀಶ್ ಗಾಯಗೊಂಡಿದ್ದರು. ಆದ್ದರಿಂದ ಅವರನ್ನು ಹೊರಗಿಡಲಾಗಿದೆ. ಆದಾಗ್ಯೂ ನಿತೀಶ್ ಅವರ ಬದಲಿಯಾಗಿ ಬೇರೆ ಯಾರನ್ನು ತಂಡಕ್ಕೆ ಸೇರಿಸಿಕೊಂಡಿಲ್ಲ.

ಕ್ಯಾನ್‌ಬೆರಾದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯಕ್ಕೂ ಮುನ್ನ ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, ನಿತೀಶ್ ಕುಮಾರ್ ರೆಡ್ಡಿ ಅವರನ್ನು ಮೊದಲ ಮೂರು ಟಿ20 ಪಂದ್ಯಗಳಿಂದ ಹೊರಗಿಡಲಾಗಿದೆ. ಅಡಿಲೇಡ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದ ವೇಳೆ ಅವರು ಎಡ ಮೊಣಕೈ ಗಾಯಕ್ಕೆ ತುತ್ತಾಗಿದ್ದರು. ಇದರ ಜೊತೆಗೆ ಕುತ್ತಿಗೆ ಸೆಳೆತದಿಂದ ಬಳಲುತ್ತಿರುವ ಅವರನ್ನು ಮೊದಲ 3 ಪಂದ್ಯಗಳಿಂದ ಹೊರಗಿಡಲಾಗಿದೆ. ಬಿಸಿಸಿಐ ವೈದ್ಯಕೀಯ ತಂಡ ಅವರ ಚೇತರಿಕೆಯ ಮೇಲೆ ನಿಗಾ ಇರಿಸಿದೆ ಎಂದಿದೆ.

ಇನ್ನು ಮೊದಲ ಟಿ20ಐ ಪಂದ್ಯಕ್ಕೆ ತಂಡದ ಆಡುವ ಹನ್ನೊಂದರ ಬಳಗದ ಬಗ್ಗೆ ಹೇಳುವುದಾದರೆ.. ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಸಮಯದಲ್ಲಿ ರಿಂಕು ಸಿಂಗ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಈ ಪಂದ್ಯದಲ್ಲಿ ಆಡುತ್ತಿಲ್ಲ ಎಂದರು. ಆದಾಗ್ಯೂ, ನಿತೀಶ್ ಅವರ ಗಾಯದ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಲಿಲ್ಲ.

ಭಾರತದ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ಜಸ್ಪ್ರಿತ್ ಬುಮ್ರಾ