ಟೀಮ್ ಇಂಡಿಯಾ ವಿರುದ್ಧ ಮತ್ತೊಮ್ಮೆ ಶರವೇಗದ ಸೆಂಚುರಿ ಸಿಡಿಸಿದ ಟ್ರಾವಿಸ್ ಹೆಡ್
Australia vs India, 3rd Test: ಬ್ರಿಸ್ಬೇನ್ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇದೀಗ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುತ್ತಿದೆ.
Updated on: Dec 15, 2024 | 10:24 AM

ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲೂ ಟ್ರಾವಿಸ್ ಹೆಡ್ ಶತಕ ಸಿಡಿಸಿದ್ದಾರೆ. ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹೆಡ್ 115 ಎಸೆತಗಳಲ್ಲಿ ಸೆಂಚುರಿ ಪೂರೈಸಿದರು. ಈ ಮೂಲಕ ಭಾರತದ ವಿರುದ್ಧ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ ಸಾಧನೆ ಮಾಡಿದ್ದಾರೆ.

ಇದಕ್ಕೂ ಮುನ್ನ ಅಡಿಲೇಡ್ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಸ್ಪೋಟಕ ಶತಕ ಬಾರಿಸಿದ್ದರು. ಆ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಹೆಡ್ 3 ಭರ್ಜರಿ ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ ಕೇವಲ 111 ಎಸೆತಗಳಲ್ಲಿ ಶತಕ ಪೂರೈಸಿದ್ದರು.

ಇದೀಗ ಬ್ರಿಸ್ಬೇನ್ನಲ್ಲೂ ಹೆಡ್ ಅಬ್ಬರ ಮುಂದುವರೆದಿದೆ. 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಎಡಗೈ ದಾಂಡಿಗ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ್ದರು. ಪರಿಣಾಮ ಹೆಡ್ ಬ್ಯಾಟ್ನಿಂದ 12 ಆಕರ್ಷಕ ಫೋರ್ಗಳು ಮೂಡಿಬಂದಿವೆ.

ಈ ಬಿರುಸಿನ ಬ್ಯಾಟಿಂಗ್ನೊಂದಿಗೆ ಹೆಡ್ ಟೆಸ್ಟ್ ಕ್ರಿಕೆಟ್ನಲ್ಲಿ 9 ಶತಕ ಪೂರೈಸಿದ್ದಾರೆ. ಹಾಗೆಯೇ ಟೀಮ್ ಇಂಡಿಯಾ ವಿರುದ್ಧ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ ಸಾಧನೆ ಮಾಡಿದ್ದಾರೆ. ಅಂದಹಾಗೆ ಇದು ಭಾರತದ ವಿರುದ್ಧ ಟ್ರಾವಿಸ್ ಹೆಡ್ ಅವರ ಮೂರನೇ ಶತಕ.

ಇದಕ್ಕೂ ಮುನ್ನ 2023ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದರು. ಲಂಡನ್ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಹೆಡ್ 174 ಎಸೆತಗಳಲ್ಲಿ 163 ರನ್ ಚಚ್ಚಿದ್ದರು. ಇದೀಗ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಸತತ ಎರಡು ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ.

ಇನ್ನು ಟ್ರಾವಿಸ್ ಹೆಡ್ ಅವರ ಈ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡವು 69 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 230 ರನ್ ಕಲೆಹಾಕಿದೆ. ಕ್ರೀಸ್ನಲ್ಲಿ ಟ್ರಾವಿಸ್ ಹೆಡ್ (102) ಹಾಗೂ ಸ್ಟೀವ್ ಸ್ಮಿತ್ (62) ಬ್ಯಾಟಿಂಗ್ ಬ್ಯಾಟಿಂಗ್ ಮಾಡುತ್ತಿದ್ದಾರೆ.



















