
ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ 253 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಂ ಇಂಡಿಯಾ 143 ರನ್ಗಳ ಮುನ್ನಡೆ ಕಾಯ್ದುಕೊಂಡಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಪರ ಮಿಂಚಿದ ವೇಗಿ ಜಸ್ಪ್ರೀತ್ ಬುಮ್ರಾ ಆಂಗ್ಲ ತಂಡದ ಒಟ್ಟು 6 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಐತಿಹಾಸಿಕ ದಾಖಲೆ ಕೂಡ ಸೃಷ್ಟಿಸಿದರು.

ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ರನ್ನು ಕ್ಲೀನ್ ಬೌಲ್ಡ್ ಮಾಡಿದ ಜಸ್ಪ್ರೀತ್ ಬುಮ್ರಾ, ಈ ವಿಕೆಟ್ನೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ 150 ವಿಕೆಟ್ ಪಡೆದ ಸಾಧನೆ ಮಾಡಿದರು.

ಈ ಇನ್ನಿಂಗ್ಸ್‌ನಲ್ಲಿ ಜೋ ರೂಟ್, ಒಲಿ ಪೋಪ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್, ಟಾಮ್ ಹಾರ್ಟ್ಲಿ, ಜೇಮ್ಸ್ ಅಂಡರ್ಸನ್ ಅವರ ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ ಟೆಸ್ಟ್‌ನಲ್ಲಿ ವೇಗವಾಗಿ 150 ಪೂರೈಸಿದ ಏಷ್ಯಾದ ಎರಡನೇ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.

ಜಸ್ಪ್ರೀತ್ ಬುಮ್ರಾ 34 ಟೆಸ್ಟ್ ಪಂದ್ಯಗಳಲ್ಲಿ ಕೇವಲ 20 ಸರಾಸರಿಯಲ್ಲಿ 151 ಟೆಸ್ಟ್ ವಿಕೆಟ್ಗಳನ್ನು ಪಡೆದಿದ್ದು, ಇದುವರೆಗೆ ಇನ್ನಿಂಗ್ಸ್‌ನಲ್ಲಿ 10 ಬಾರಿ ಐದು ವಿಕೆಟ್ಗಳನ್ನು ಪಡೆದ ಸಾಧನೆ ಮಾಡಿದ್ದಾರೆ.

ಇದರೊಂದಿಗೆ ಬುಮ್ರಾ ಭಾರತದ ಪರ 150 ಟೆಸ್ಟ್ ವಿಕೆಟ್‌ಗಳನ್ನು ಪಡೆದ 17ನೇ ಬೌಲರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಐದನೇ ವಿಕೆಟ್ ಪಡೆಯುವ ಮೂಲಕ ರವಿಶಾಸ್ತ್ರಿ ಅವರ 151 ಟೆಸ್ಟ್ ವಿಕೆಟ್‌ಗಳನ್ನು ಬುಮ್ರಾ ಸರಿಗಟ್ಟಿದರು.

ಇದಲ್ಲದೇ, ಬುಮ್ರಾ ಭಾರತದ ಪರ ಅತಿ ಕಡಿಮೆ ಎಸೆತಗಳಲ್ಲಿ (6781 ಎಸೆತಗಳು) 150 ಟೆಸ್ಟ್ ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.