
ಎಡ್ಜ್ ಬಾಸ್ಟನ್ ಸ್ಟೇಡಿಯಂನಲ್ಲಿ ಮಾರಕ ದಾಳಿ ಸಂಘಟಿಸಿ ಟೀಮ್ ಇಂಡಿಯಾ ವೇಗಿ ಆಕಾಶ್ ದೀಪ್ (Akash Deep) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಬರೋಬ್ಬರಿ 10 ವಿಕೆಟ್ ಕಬಳಿಸಿ ಎಂಬುದು ವಿಶೇಷ.

ಈ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 4 ವಿಕೆಟ್ ಪಡೆದು ಮಿಂಚಿದ್ದ ಆಕಾಶ್, ದ್ವಿತೀಯ ಇನಿಂಗ್ಸ್ ನಲ್ಲಿ 99 ರನ್ ನೀಡಿ 6 ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ಒಟ್ಟು 10 ವಿಕೆಟ್ ಕಬಳಿಸಿ ಭಾರತ ತಂಡಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ.

ಈ ಐತಿಹಾಸಿಕ ಗೆಲುವಿನೊಂದಿಗೆ ಆಕಾಶ್ ದೀಪ್ ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಅಂದರೆ ಎಡ್ಜ್ ಬಾಸ್ಟನ್ ಸ್ಟೇಡಿಯಂನಲ್ಲಿ ಅತೀ ಕಡಿಮೆ ರನ್ ನೀಡಿ 10 ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಯನ್ನು ಆಕಾಶ್ ದೀಪ್ ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಇಂತಹದೊಂದು ಸಾಧನೆ ಮಾಡಿದ್ದು ಚೇತನ್ ಶರ್ಮಾ. 1986 ರಲ್ಲಿ ಎಡ್ಜ್ ಬಾಸ್ಟನ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ನಲ್ಲಿ ಚೇತನ್ ಶರ್ಮಾ 188 ರನ್ ನೀಡಿ ಒಟ್ಟು 10 ವಿಕೆಟ್ ಕಬಳಿಸಿದ್ದರು. ಇದಾದ ಬಳಿಕ ಈ ಮೈದಾನದಲ್ಲಿ ಟೀಮ್ ಇಂಡಿಯಾದ ಯಾವುದೇ ಬೌಲರ್ ಟೆಸ್ಟ್ ಪಂದ್ಯವೊಂದರಲ್ಲಿ 10 ವಿಕೆಟ್ ಪಡೆದಿರಲಿಲ್ಲ.

ಇದೀಗ ಬರೋಬ್ಬರಿ 39 ವರ್ಷಗಳ ಬಳಿಕ ಆಕಾಶ್ ದೀಪ್ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದಾರೆ. ಅಲ್ಲದೆ 187 ರನ್ ನೀಡಿ 10 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಎಡ್ಜ್ ಬಾಸ್ಟನ್ ಸ್ಟೇಡಿಯಂನಲ್ಲಿ ಅತೀ ಕಡಿಮೆ ರನ್ ನೀಡಿ 10 ವಿಕೆಟ್ ಕಬಳಿಸಿದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.
Published On - 7:57 am, Mon, 7 July 25