
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ (Mohammed Siraj) ವಿಶೇಷ ಸಾಧನೆ ಮಾಡಿದ್ದಾರೆ. ಅದು ಸಹ ತನ್ನ ಗುರು ವಿರಾಟ್ ಕೊಹ್ಲಿಯ (Virat Kohli) ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಇಂಗ್ಲೆಂಡ್ ವಿರುದ್ಧದ ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯ ನಾಲ್ಕು ಪಂದ್ಯಗಳಲ್ಲೂ ಕಾಣಿಸಿಕೊಳ್ಳುವ ಮೂಲಕ ಮೊಹಮ್ಮದ್ ಸಿರಾಜ್ ಈ ದಶಕದಲ್ಲಿ ಅತ್ಯಧಿಕ ಟೆಸ್ಟ್ ಮ್ಯಾಚ್ಗಳನ್ನು ಆಡಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

ವಿರಾಟ್ ಕೊಹ್ಲಿ ಈ ದಶಕದಲ್ಲಿ ಒಟ್ಟು 39 ಟೆಸ್ಟ್ ಪಂದ್ಯಗಳನ್ನಾಡುವ ಮೂಲಕ ಭಾರತದ ಪರ ವಿಶೇಷ ದಾಖಲೆ ನಿರ್ಮಿಸಿದ್ದರು. ಇದೀಗ ಸತತ ಪಂದ್ಯಗಳನ್ನಾಡುವ ಮೂಲಕ ಈ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನಕ್ಕೇರಿದ್ದಾರೆ. ಟೀಮ್ ಇಂಡಿಯಾ ವೇಗಿ ಈ ದಶಕದಲ್ಲಿ ಈವರೆಗೆ 40 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ.

ಈ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ತನ್ನದಾಗಿಸಿಕೊಳ್ಳುವಲ್ಲಿ ಮೊಹಮ್ಮದ್ ಸಿರಾಜ್ ಯಶಸ್ವಿಯಾಗಿದ್ದಾರೆ. ಅಷ್ಟೇ ಅಲ್ಲದೆ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯವು ಸಿರಾಜ್ ಅವರ ನೂರನೇ ಅಂತಾರಾಷ್ಟ್ರೀಯ ಪಂದ್ಯ. ಈ ಮೂಲಕ ಭಾರತದ ಪರ 100 ಮ್ಯಾಚ್ಗಳನ್ನು ಆಡಿದ ಆಟಗಾರರ ಪಟ್ಟಿಗೂ ಮೊಹಮ್ಮದ್ ಸಿರಾಜ್ ಸೇರ್ಪಡೆಯಾಗಿದ್ದಾರೆ.

ಟೀಮ್ ಇಂಡಿಯಾ ಪರ ಈವರೆಗೆ 100 ಪಂದ್ಯಗಳಲ್ಲಿ ಕಾಣಿಸಿಕೊಂಡಿರುವ ಮೊಹಮ್ಮದ್ ಸಿರಾಜ್ ಒಟ್ಟು 198 ವಿಕೆಟ್ಗಳನ್ನು ಕಬಳಿಸಿದ್ದಾರೆ. ಇನ್ನು ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 2 ವಿಕೆಟ್ ಪಡೆದರೆ ಭಾರತದ ಪರ 200 ವಿಕೆಟ್ಗಳನ್ನು ಕಬಳಿಸಿದ ಬೌಲರ್ಗಳ ಪಟ್ಟಿಯಲ್ಲೂ ಸೇರ್ಪಡೆಯಾಗಲಿದ್ದಾರೆ. ಹೀಗಾಗಿ ಮ್ಯಾಂಚೆಸ್ಟರ್ ಟೆಸ್ಟ್ ಸಿರಾಜ್ ಪಾಲಿಗೆ ಅವಿಸ್ಮರಣೀಯ ಪಂದ್ಯ ಎಂದರೆ ತಪ್ಪಾಗಲಾರದು.