
ಭಾರತ ಮತ್ತು ಶ್ರೀಲಂಕಾ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಿದೆ. ಕೊಲಂಬೊದ ಆರ್ ಪ್ರೇಮದಾಸ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊದಲ ಏಕದಿನ ಪಂದ್ಯ ನಡೆಯುತ್ತಿದೆ. ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 230 ರನ್ ಕಲೆಹಾಕಿತು.

ಈ ಪಂದ್ಯದಲ್ಲಿ ಭಾರತದ ಪರ ಎರಡನೇ ಓವರ್ ಬೌಲ್ ಮಾಡಿದ ಮೊಹಮ್ಮದ್ ಸಿರಾಜ್, ಶ್ರೀಲಂಕಾದ ಆರಂಭಿಕ ಆಟಗಾರ ಅವಿಷ್ಕಾ ಫರ್ನಾಂಡೋ ಅವರನ್ನು ಪೆವಿಲಿಯನ್ಗಟ್ಟುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಮೊಹಮ್ಮದ್ ಸಿರಾಜ್ ಏಕದಿನ ಕ್ರಿಕೆಟ್‌ನಲ್ಲಿ ಅದರಲ್ಲೂ ಪವರ್ ಪ್ಲೇನಲ್ಲಿ ಬೆಸ್ಟ್ ಬೌಲರ್ ಎನಿಸಿಕೊಂಡಿದ್ದಾರೆ.

ಶ್ರೀಲಂಕಾ ವಿರುದ್ಧದ ಇಂದಿನ ಪಂದ್ಯದಲ್ಲಿ ಆರಂಭಿಕ ಅವಿಷ್ಕಾ ಫರ್ನಾಂಡೋ ಅವರ ವಿಕೆಟ್ ಉರುಳಿಸಿದ ಸಿರಾಜ್, 2023 ರಿಂದ ಏಕದಿನ ಪಂದ್ಯಗಳಲ್ಲಿ ಪವರ್ ಪ್ಲೇನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಸಿರಾಜ್ ಇದುವರೆಗೆ ಪವರ್ ಪ್ಲೇನಲ್ಲಿ 24 ವಿಕೆಟ್ ಪಡೆದಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಶ್ರೀಲಂಕಾದ ದಿಲ್ಶನ್ ಮಧುಶಂಕ ಎರಡನೇ ಸ್ಥಾನದಲ್ಲಿದ್ದಾರೆ. ಮಧುಶಂಕ 2023 ರಿಂದ ಇದುವರೆಗೆ ಏಕದಿನ ಕ್ರಿಕೆಟ್‌ನಲ್ಲಿ ಪವರ್ ಪ್ಲೇನಲ್ಲಿ ಒಟ್ಟು 22 ವಿಕೆಟ್ ಪಡೆದಿದ್ದಾರೆ. ಮೂರನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಮಾರ್ಕೊ ಯಾನ್ಸನ್ 17 ವಿಕೆಟ್ ಪಡೆದಿದ್ದಾರೆ.

ಶ್ರೀಲಂಕಾ ವಿರುದ್ಧ ಸೀಮಿತ ಓವರ್‌ಗಳಲ್ಲಿ ಭಾರತದ ಪರ ಮೊಹಮ್ಮದ್ ಸಿರಾಜ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಮೊಹಮ್ಮದ್ ಸಿರಾಜ್ ಅವರ ಅತ್ಯುತ್ತಮ ಬೌಲಿಂಗ್ ಫಿಗರ್ ಶ್ರೀಲಂಕಾ ವಿರುದ್ಧವೇ ಆಗಿದೆ. ಕಳೆದ ವರ್ಷ ನಡೆದ ಏಕದಿನ ಏಷ್ಯಾಕಪ್‌ನ ಫೈನಲ್ ಪಂದ್ಯದಲ್ಲಿ ಸಿರಾಜ್, ಲಂಕಾ ವಿರುದ್ಧ ಕೇವಲ 21 ರನ್ ನೀಡಿ 6 ವಿಕೆಟ್ ಪಡೆದಿದ್ದರು.