Updated on: Feb 11, 2023 | 7:23 PM
ನಾಗ್ಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಭಾರತೀಯ ಆಟಗಾರರು ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚುವ ಮೂಲಕ ಇನಿಂಗ್ಸ್ ಹಾಗೂ 132 ರನ್ಗಳ ಜಯ ಸಾಧಿಸಿತು.
ವಿಶೇಷ ಎಂದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿ ಕೂಡ ಮಿಂಚಿದ್ದರು. ಮೊದಲ ಇನಿಂಗ್ಸ್ನಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಹಿಟ್ಮ್ಯಾನ್ 212 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 15 ಫೋರ್ನೊಂದಿಗೆ 120 ರನ್ ಬಾರಿಸಿದ್ದರು. ಈ ಶತಕದೊಂದಿಗೆ ಹಿಟ್ಮ್ಯಾನ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಸೆಂಚುರಿ ದಾಖಲೆಯನ್ನು ಕೂಡ ಸರಿಗಟ್ಟಿರುವುದು ವಿಶೇಷ.
ಅಂದರೆ ಆಸ್ಟ್ರೇಲಿಯಾ ವಿರುದ್ಧ ಆರಂಭಿಕರಾಗಿ ಅತ್ಯಧಿಕ ಶತಕ ಬಾರಿಸಿದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಇದೀಗ ರೋಹಿತ್ ಶರ್ಮಾ ಸರಿದೂಗಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಆಸ್ಟ್ರೇಲಿಯಾ ವಿರುದ್ಧ ಆರಂಭಿಕರಾಗಿ ಒಟ್ಟು 9 ಶತಕಗಳನ್ನು ಸಿಡಿಸಿ ದಾಖಲೆ ನಿರ್ಮಿಸಿದ್ದರು.
ಇದೀಗ ಹಿಟ್ಮ್ಯಾನ್ ಈ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ. ರೋಹಿತ್ ಶರ್ಮಾ ಆಸೀಸ್ ವಿರುದ್ಧ ಏಕದಿನ ಕ್ರಿಕೆಟ್ನಲ್ಲಿ 8 ಶತಕ ಬಾರಿಸಿದರೆ, ಇದೀಗ ಟೆಸ್ಟ್ನಲ್ಲಿ 1 ಶತಕ ಪೂರೈಸಿದ್ದಾರೆ. ಈ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ.
ಇದಲ್ಲದೆ ಟೀಮ್ ಇಂಡಿಯಾ ಪರ ಮೂರು ಮಾದರಿಯ ಕ್ರಿಕೆಟ್ನಲ್ಲೂ ಶತಕ ಬಾರಿಸಿದ ನಾಯಕ ಎಂಬ ಹೆಗ್ಗಳಿಕೆಗೂ ಹಿಟ್ಮ್ಯಾನ್ ಪಾತ್ರರಾಗಿದ್ದಾರೆ. ಈ ಹಿಂದೆ ಧೋನಿ ಹಾಗೂ ವಿರಾಟ್ ಕೊಹ್ಲಿ ನಾಯಕರಾಗಿ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ನಲ್ಲಿ ಶತಕ ಬಾರಿಸಿದರೂ ಟಿ20 ಕ್ರಿಕೆಟ್ನಲ್ಲಿ ಸೆಂಚುರಿ ಸಿಡಿಸಲು ಸಾಧ್ಯವಾಗಿರಲಿಲ್ಲ.
ಆದರೆ ಹಿಟ್ಮ್ಯಾನ್ ನಾಯಕರಾಗಿ ಏಕದಿನ ಕ್ರಿಕೆಟ್ನಲ್ಲಿ 3 ಶತಕ ಬಾರಿಸಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್ನಲ್ಲಿ 2 ಸೆಂಚುರಿ ಸಿಡಿಸಿದ್ದಾರೆ. ಇದೀಗ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ನಲ್ಲಿ ಶತಕ ಬಾರಿಸುವ ಮೂಲಕ ಮೂರು ಸ್ವರೂಪಗಳಲ್ಲಿ ಸೆಂಚುರಿ ಸಿಡಿಸಿದ ಮೊದಲ ಕ್ಯಾಪ್ಟನ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.
Published On - 7:22 pm, Sat, 11 February 23