
ಆಗಸ್ಟ್ 15 ಶುಕ್ರವಾರ ಭಾರತ ಸ್ವಾತಂತ್ರ್ಯ ಪಡೆದು 79 ವರ್ಷಗಳನ್ನು ಪೂರೈಸಿದೆ. ಈ ವಿಶೇಷ ದಿನದಂದು ಭಾರತ ಕ್ರಿಕೆಟ್ನ ಹಲವು ದಿಗ್ಗಜ ಆಟಗಾರರು ದೇಶವಾಸಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ. ಭಾರತೀಯ ತಂಡದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ , ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಟೆಸ್ಟ್ ತಂಡದ ನಾಯಕ ಶುಭ್‌ಮನ್ ಗಿಲ್ ಕೂಡ ತಮ್ಮ ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಸಚಿನ್ ತೆಂಡೂಲ್ಕರ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ನಲ್ಲಿ ತ್ರಿವಣ ಧ್ವಜವನ್ನು ಹಿಡಿದಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ "ಜೈ ಹಿಂದ್" ಎಂಬ ಶೀರ್ಷಿಕೆಯನ್ನು ಬರೆದಿದ್ದಾರೆ. ಅದೇ ಚಿತ್ರವನ್ನು ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿಯೂ ಪೋಸ್ಟ್ ಮಾಡಿದ್ದಾರೆ.

ವಿರಾಟ್ ಕೊಹ್ಲಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಒಂದು ಸ್ಟೋರಿಯನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ‘ಇಂದು ನಾವು ಸ್ವಾತಂತ್ರ್ಯವನ್ನು ನೋಡಿ ನಗುತ್ತಿದ್ದೇವೆ ಏಕೆಂದರೆ ನಮ್ಮ ಸೈನಿಕರು ಗಡಿಯಲ್ಲಿ ಧೈರ್ಯದಿಂದ ನಿಂತಿದ್ದಾರೆ. ಇಂದು ನಾವು ಸ್ವಾತಂತ್ರ್ಯ ದಿನದಂದು ನಮ್ಮ ವೀರರಿಗೆ ನಮಸ್ಕರಿಸಬೇಕು ಮತ್ತು ಗೌರವಿಸಬೇಕು. ಭಾರತೀಯನಾಗಿರುವುದಕ್ಕೆ ಹೆಮ್ಮೆಯಿದೆ, ಜೈ ಹಿಂದ್’ ಎಂದು ಬರೆದುಕೊಂಡಿದ್ದಾರೆ.

ರೋಹಿತ್ ಶರ್ಮಾ ಕೂಡ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಮೈದಾನದಲ್ಲಿ ಭಾರತದ ಧ್ವಜವನ್ನು ನೆಟ್ಟಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋ 2024 ರ ಟಿ20 ವಿಶ್ವಕಪ್ ಫೈನಲ್ ಪಂದ್ಯದ ನಂತರ ತೆಗೆದ ಚಿತ್ರವಾಗಿದೆ. ಈ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಟಿ20 ಚಾಂಪಿಯನ್ ಆಯಿತು.

ಟೀಮ್ ಇಂಡಿಯಾದ ಅನುಭವಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ ತ್ರಿವಣ ಧ್ವಜವನ್ನು ಹಿಡಿದಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಕೂಡ 2024 ರ ಟಿ20 ವಿಶ್ವಕಪ್ ಫೈನಲ್ ಪಂದ್ಯದ ನಂತರ ತೆಗೆದದ್ದಾಗಿದೆ. ಹಾರ್ದಿಕ್ ಭಾರತದ ಧ್ವಜವನ್ನು ತಮ್ಮ ಭುಜದ ಮೇಲೆ ಹೊತ್ತುಕೊಂಡಿದ್ದಾರೆ.

ಇರ್ಫಾನ್ ಪಠಾಣ್ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಎಲ್ಲಾ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ. ಈ ಸಂದರ್ಭದಲ್ಲಿ, ಅವರು ಎಲ್ಲಾ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು! ನಾವು ಸಾಕಷ್ಟು ಹೋರಾಟದ ನಂತರ ನಮ್ಮ ಸ್ವಾತಂತ್ರ್ಯವನ್ನು ಪಡೆದುಕೊಂಡಿದ್ದೇವೆ. ಭಾವನೆ, ಕ್ರಿಯೆ ಮತ್ತು ಏಕತೆಯೊಂದಿಗೆ ಅದನ್ನು ಜೀವಂತವಾಗಿರಿಸುವುದು ನಮ್ಮ ಕರ್ತವ್ಯ. ಜೈ ಹಿಂದ್! ಎಂದು ಬರೆದುಕೊಂಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ‘ನನ್ನ ದೇಶ, ನನ್ನ ಗುರುತು, ನನ್ನ ಜೀವನ! ಜೈ ಹಿಂದ್!" ಎಂದು ಬರೆದಿರುವ ಸ್ಟೋರಿಯನ್ನು ಪೋಸ್ಟ್ ಮಾಡಿದ್ದಾರೆ.

ಬಿಸಿಸಿಐ ಕೂಡ ಎಲ್ಲಾ ದೇಶವಾಸಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದೆ. ತನ್ನ ಅಧಿಕೃತ ಸೋಶೀಯಲ್ ಮೀಡಿಯಾ ಖಾತೆಯಲ್ಲಿ ಒಂದು ಫೋಟೋವನ್ನು ಹಂಚಿಕೊಂಡಿದ್ದು, ಅದರಲ್ಲಿ ‘ಎಲ್ಲಾ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಜೈ ಹಿಂದ್’ ಎಂದು ಬರೆದಿದೆ.