ಏಕದಿನ ವಿಶ್ವಕಪ್ 2023 ರಲ್ಲಿ ಸೋಲಿಲ್ಲದ ಸರದಾರರಾಗಿ ಮುನ್ನುಗ್ಗುತ್ತಿರುವ ಟೀಮ್ ಇಂಡಿಯಾ ಇದೀಗ 7ನೇ ಪಂದ್ಯಕ್ಕೆ ಸಜ್ಜಾಗಿದೆ. ಗುರುವಾರ (ನವೆಂಬರ್ 2) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ನ 33ನೇ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ತಂಡವನ್ನು ಎದುರಿಸಲಿದೆ.
ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ವೇಳೆ ಮೊಣಕಾಲು ನೋವಿನ ಸಮಸ್ಯೆಗೆ ಒಳಗಾಗಿದ್ದ ಪಾಂಡ್ಯ ಇನ್ನೂ ಕೂಡ ಚೇತರಿಸಿಕೊಂಡಿಲ್ಲ.
ಇದೇ ಕಾರಣದಿಂದಾಗಿ ನ್ಯೂಝಿಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಇದಾಗ್ಯೂ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪಾಂಡ್ಯ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಆದರೀಗ ಈ ಪಂದ್ಯದಿಂದಲೂ ಹಾರ್ದಿಕ್ ಹೊರಗುಳಿಯುವುದು ಖಚಿತವಾಗಿದೆ.
ಅಷ್ಟೇ ಅಲ್ಲದೆ ನವೆಂಬರ್ 5 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ. ಇದರೊಂದಿಗೆ ಮುಂದಿನ 2 ಪಂದ್ಯಗಳಿಗೆ ಹಾರ್ದಿಕ್ ಪಾಂಡ್ಯ ಅಲಭ್ಯರಾಗುವುದು ಕನ್ಫರ್ಮ್ ಆದಂತಾಗಿದೆ.
ಇನ್ನು ಸೆಪ್ಟೆಂಬರ್ 12 ರೊಳಗೆ ಅವರು ಸಂಪೂರ್ಣವಾಗಿ ಚೇತರಿಸಿಕೊಂಡರೆ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಬಹುದು. ಇಲ್ಲದಿದ್ದರೆ ಹಾರ್ದಿಕ್ ಪಾಂಡ್ಯ ಕಂಬ್ಯಾಕ್ಗಾಗಿ ಸೆಮಿಫೈನಲ್ ಪಂದ್ಯದವರೆಗೂ ಕಾಯಬೇಕಾಗುತ್ತದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.