IPL 2023: ಐಪಿಎಲ್ನ 50ನೇ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದರು.
ಅದರಂತೆ ಇನಿಂಗ್ಸ್ ಆರಂಭಿಸಿದ ಆರ್ಸಿಬಿಗೆ ಫಾಫ್ ಹಾಗೂ ಕೊಹ್ಲಿ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 10 ಓವರ್ಗಳಲ್ಲಿ 82 ರನ್ ಕಲೆಹಾಕುವ ಮೂಲಕ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ಈ ಹಂತದಲ್ಲಿ ಡುಪ್ಲೆಸಿಸ್ (45) ಔಟಾದರು. ಇದರ ಬೆನ್ನಲ್ಲೇ ಗ್ಲೆನ್ ಮ್ಯಾಕ್ಸ್ವೆಲ್ (0) ಕೂಡ ಮಿಚೆಲ್ ಮಾರ್ಷ್ಗೆ ವಿಕೆಟ್ ಒಪ್ಪಿಸಿದರು.
ಮತ್ತೊಂದೆಡೆ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ 42 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 46 ಎಸೆತಗಳಲ್ಲಿ 55 ರನ್ ಬಾರಿಸಿ 16ನೇ ಓವರ್ನಲ್ಲಿ ಮುಕೇಶ್ ಕುಮಾರ್ಗೆ ವಿಕೆಟ್ ಒಪ್ಪಿಸಿದರು.
182 ರನ್ಗಳ ಬೃಹತ್ ಮೊತ್ತವನ್ನು ಚೇಸ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 45 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್ನೊಂದಿಗೆ 87 ರನ್ ಬಾರಿಸಿ ಸಾಲ್ಟ್ ಔಟಾದರು.
ಮತ್ತೊಂದೆಡೆ ಮಿಚೆಲ್ ಮಾರ್ಷ್ 26 ರನ್ ಬಾರಿಸಿದರೆ, ರಿಲೀ ರೊಸ್ಸೊವ್ ಅಜೇಯ 35 ರನ್ ಬಾರಿಸಿದರು. ಅದರಂತೆ 16.4 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 187 ರನ್ ಬಾರಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.
ಈ ಗೆಲುವಿನ ಬಳಿಕ ಉಭಯ ತಂಡಗಳ ಆಟಗಾರರು ಪರಸ್ಪರ ಹಸ್ತಲಾಘವ ಮಾಡಿದರು. ಇದೇ ವೇಳೆ ವಿರಾಟ್ ಕೊಹ್ಲಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿರ್ದೇಶಕ ಸೌರವ್ ಗಂಗೂಲಿ ಪರಸ್ಪರ ಮುಖಾಮುಖಿಯಾಗಿದ್ದರು.
ಆದರೆ ಈ ಬಾರಿ ಇಬ್ಬರು ಪರಸ್ಪರ ಕೈ ಕುಲುಕುವ ಮೂಲಕ ಎಲ್ಲಾ ವೈಮನಸ್ಸಿಗೂ ತೆರೆ ಎಳೆದರು. ಅಲ್ಲದೆ ಗಂಗೂಲಿ ಕೊಹ್ಲಿಯ ಬೆನ್ನು ತಟ್ಟುವ ಮೂಲಕ ಗಮನ ಸೆಳೆದರು.
ಇದಕ್ಕೂ ಮುನ್ನ, ಅಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್ಸಿಬಿ-ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದ ವೇಳೆ ವಿರಾಟ್ ಕೊಹ್ಲಿ-ಗಂಗೂಲಿ ಶೇಕ್ ಹ್ಯಾಂಡ್ ಮಾಡಿರಲಿಲ್ಲ.
ಅಷ್ಟೇ ಅಲ್ಲದೆ ಆ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಗಂಗೂಲಿಯನ್ನು ಗುರಾಯಿಸುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆದರೆ ಈ ಬಾರಿ ಇಬ್ಬರು ಪರಸ್ಪರ ಕೈಕುಲುಕುವ ಎಲ್ಲಾ ವೈಮನಸ್ಸಿಗೂ ತೆರೆ ಎಳೆಯುವ ಸೂಚನೆ ನೀಡಿದ್ದಾರೆ.
ಅಂದಹಾಗೆ ಭಾರತ ಏಕದಿನ ತಂಡದ ನಾಯಕತ್ವದಿಂದ ಕೆಳಗಿಳಿಸಿದ ಬಳಿಕ ವಿರಾಟ್ ಕೊಹ್ಲಿ ಹಾಗೂ ಅಂದಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಡುವೆ ವೈಮನಸ್ಸು ಮೂಡಿತ್ತು. ಇದಾದ ಬಳಿಕ ಇಬ್ಬರು ಜೊತೆಯಾಗಿ ಕಾಣಿಸಿಕೊಂಡಿರುವುದು ಇದೇ ಮೊದಲ ಬಾರಿಗೆ ಎಂಬುದು ವಿಶೇಷ.