IPL 2023: ಐಪಿಎಲ್ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಬೀಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೆಕೆಆರ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲನುಭವಿಸಿದೆ.
ಸತತ ಎರಡು ಸೋಲುಗಳ ಕಂಗೆಟ್ಟಿರುವ ಆರ್ಸಿಬಿ ಸದ್ಯ ಪಾಯಿಂಟ್ಸ್ ಟೇಬಲ್ನಲ್ಲಿ 7ನೇ ಸ್ಥಾನದಲ್ಲಿದೆ. ಈ ಸೋಲುಗಳ ಬೆನ್ನಲ್ಲೇ ಇದೀಗ ಆರ್ಸಿಬಿ ತಂಡಕ್ಕೆ ಮ್ಯಾಚ್ ವಿನ್ನರ್ ಆಟಗಾರ ಎಂಟ್ರಿ ಕೊಟ್ಟಿರುವುದು ವಿಶೇಷ.
ಹೌದು, ಆರ್ಸಿಬಿ ತಂಡದ ಸ್ಟಾರ್ ಆಲ್ರೌಂಡರ್ ವನಿಂದು ಹಸರಂಗ ಬೆಂಗಳೂರಿನಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಸರಣಿ ಆಡುತ್ತಿದ್ದ ಕಾರಣ ಶ್ರೀಲಂಕಾ ಸ್ಪಿನ್ನರ್ ಆರ್ಸಿಬಿ ತಂಡದ ಮೊದಲ ಮೂರು ಪಂದ್ಯಗಳಿಗೆ ಅಲಭ್ಯರಾಗಿದ್ದರು.
ಇದೀಗ ವನಿಂದು ಹಸರಂಗ ಆರ್ಸಿಬಿ ಬಳಗವನ್ನು ಕೂಡಿಕೊಂಡಿದ್ದು, ಏಪ್ರಿಲ್ 15 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಲಭ್ಯರಿರಲಿದ್ದಾರೆ. ಇದರಿಂದ ಆರ್ಸಿಬಿ ಪ್ಲೇಯಿಂಗ್ ಇಲೆವೆನ್ ಮತ್ತಷ್ಟು ಬಲಿಷ್ಠವಾಗಲಿದೆ.
ಏಕೆಂದರೆ ಕಳೆದ ಸೀಸನ್ನಲ್ಲಿ ಆರ್ಸಿಬಿ ಪರ 16 ಪಂದ್ಯಗಳನ್ನಾಡಿದ್ದ ಹಸರಂಗ ಒಟ್ಟು 26 ವಿಕೆಟ್ ಕಬಳಿಸಿದ್ದರು. ಅಲ್ಲದೆ ಆರ್ಸಿಬಿ ತಂಡವು ಪ್ಲೇಆಫ್ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಸದ್ಯ ಆರ್ಸಿಬಿ ತಂಡದ ಕಳಪೆ ಬೌಲಿಂಗ್ ಲೈನಪ್ನಿಂದ ಕಂಗೆಟ್ಟಿದೆ. ಇದೀಗ ಸ್ಪಿನ್ ಮೋಡಿಗಾರ ವನಿಂದು ಹಸರಂಗ ಆರ್ಸಿಬಿ ತಂಡವನ್ನು ಸೇರಿಕೊಂಡಿರುವುದು ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ.
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಖ್ ವಿಜಯಕುಮಾರ್.