ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ (IPL 2024) 62ನೇ ಪಂದ್ಯದ ಮೂಲಕ ದಿನೇಶ್ ಕಾರ್ತಿಕ್ (Dinesh Karthik) ಅನಗತ್ಯ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ಡಕ್ ಔಟ್ ಆಗುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಡಿಕೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು.
ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಸೊನ್ನೆಗೆ ಔಟಾದ ಬ್ಯಾಟರ್ ಎಂಬ ಹೀನಾಯ ದಾಖಲೆಯೊಂದು ದಿನೇಶ್ ಕಾರ್ತಿಕ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ರೋಹಿತ್ ಶರ್ಮಾ ಹೆಸರಿನಲ್ಲಿದ್ದವು.
ಐಪಿಎಲ್ನಲ್ಲಿ 127 ಇನಿಂಗ್ಸ್ ಆಡಿರುವ ಗ್ಲೆನ್ ಮ್ಯಾಕ್ಸ್ವೆಲ್ ಒಟ್ಟು 17 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅತ್ಯಧಿಕ ಬಾರಿ ಡಕ್ ಔಟ್ ಆದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಹಾಗೆಯೇ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಐಪಿಎಲ್ನಲ್ಲಿ ಈವರೆಗೆ 251 ಇನಿಂಗ್ಸ್ ಆಡಿದ್ದು, ಈ ವೇಳೆ 17 ಬಾರಿ ಸೊನ್ನೆ ಸುತ್ತಿದ್ದಾರೆ. ಇದೀಗ ಮ್ಯಾಕ್ಸ್ವೆಲ್ ಹಾಗೂ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ ಡಿಕೆ ಅಗ್ರಸ್ಥಾನಕ್ಕೇರಿದ್ದಾರೆ.
ಐಪಿಎಲ್ನಲ್ಲಿ ಇದುವರೆಗೆ 232 ಇನಿಂಗ್ಸ್ ಆಡಿರುವ ದಿನೇಶ್ ಕಾರ್ತಿಕ್ ಒಟ್ಟು 18 ಬಾರಿ ಡಕ್ ಔಟ್ ಆಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಸೊನ್ನೆ ಸುತ್ತಿದ ಬ್ಯಾಟರ್ ಎಂಬ ಅನಗತ್ಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
ಗೆದ್ದು ಬೀಗಿದ ಆರ್ಸಿಬಿ: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಜತ್ ಪಾಟಿದಾರ್ (52) ಅವರ ಅರ್ಧಶತಕದ ನೆರವಿನಿಂದ 20 ಓವರ್ಗಳಲ್ಲಿ 187 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 140 ರನ್ಗಳಿಗೆ ಆಲೌಟ್ ಆಗುವ ಮೂಲಕ 47 ರನ್ಗಳಿಂದ ಸೋಲೊಪ್ಪಿಕೊಂಡಿದೆ.