
IPL 2024: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ RCB ತಂಡದ ನಾಯಕ ಫಾಫ್ ಡುಪ್ಲೆಸಿಸ್ (Faf du plessis) ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಸ್ಪೋಟಕ ದಾಂಡಿಗ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಶಕದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್ಗಳಲ್ಲಿ 147 ರನ್ಗಳಿಸಿ ಆಲೌಟ್ ಆಯಿತು. 148 ರನ್ಗಳ ಗುರಿ ಬೆನ್ನತ್ತಿದ ಅರ್ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ಫಾಫ್ ಡುಪ್ಲೆಸಿಸ್ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಹಾಫ್ ಸೆಂಚುರಿ ಬಳಿಕ ಕೂಡ ಆರ್ಭಟ ಮುಂದುವರೆಸಿದ ಆರ್ಸಿಬಿ ನಾಯಕ 23 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ 64 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ವಿಶೇಷ ಎಂದರೆ ಈ 64 ರನ್ಗಳನ್ನು ಫಾಫ್ ಡುಪ್ಲೆಸಿಸ್ ಮೊದಲ 6 ಓವರ್ಗಳಲ್ಲೇ ಕಲೆಹಾಕಿದ್ದರು. ಈ ಮೂಲಕ ಆರ್ಸಿಬಿ ಪರ ಪವರ್ಪ್ಲೇನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ ಈ ರೆಕಾರ್ಡ್ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. 2012 ರಲ್ಲಿ ಪುಣೆ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಗೇಲ್ ಪವರ್ಪ್ಲೇನಲ್ಲಿ 50 ರನ್ ಸಿಡಿಸಿ ಈ ದಾಖಲೆ ಬರೆದಿದ್ದರು.

ಇದೀಗ 64 ರನ್ಗಳೊಂದಿಗೆ ಈ ದಾಖಲೆಯನ್ನು ಮುರಿಯುವಲ್ಲಿ ಫಾಫ್ ಡುಪ್ಲೆಸಿಸ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಪವರ್ಪ್ಲೇನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.