ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಶುರುವಾಗಿದೆ. ಚೆನ್ನೈನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆರ್ಸಿಬಿ ತಂಡಕ್ಕೆ ಸೋಲುಣಿಸಿ ಸಿಎಸ್ಕೆ ತಂಡ ಶುಭಾರಂಭ ಮಾಡಿದೆ. ಈ ಪಂದ್ಯದ ಮೂಲಕ ಆರ್ಸಿಬಿ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ (Glenn Maxwell) ಅನಗತ್ಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.
ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್ವೆಲ್ (0) ದೀಪಕ್ ಚಹರ್ ಎಸೆತದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್ಗಳ ಪಟ್ಟಿಯಲ್ಲಿ ಮ್ಯಾಕ್ಸ್ವೆಲ್ ಮೂರನೇ ಸ್ಥಾನಕ್ಕೇರಿದ್ದಾರೆ.
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ದಿನೇಶ್ ಕಾರ್ತಿಕ್. 222 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರುವ ಡಿಕೆ ಒಟ್ಟು 17 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಅತೀ ಹೆಚ್ಚು ಬಾರಿ ಸೊನ್ನೆಗೆ ವಿಕೆಟ್ ಒಪ್ಪಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಇನ್ನು ದ್ವಿತೀಯ ಸ್ಥಾನದಲ್ಲಿರುವುದ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ. 238 ಇನಿಂಗ್ಸ್ಗಳಲ್ಲಿ ಹಿಟ್ಮ್ಯಾನ್ ಒಟ್ಟು 16 ಬಾರಿ ಸೊನ್ನೆಗೆ ಔಟಾಗಿದ್ದಾರೆ.
ಇದೀಗ 121ನೇ ಇನಿಂಗ್ಸ್ನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ 15ನೇ ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಐಪಿಎಲ್ನ ಡಕ್ ರಾಜರ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.
ಇನ್ನು ಗ್ಲೆನ್ ಮ್ಯಾಕ್ಸ್ವೆಲ್ ಅಲ್ಲದೆ, ಮಂದೀಪ್ ಸಿಂಗ್ ಹಾಗೂ ಸುನಿಲ್ ನರೈನ್ ಕೂಡ 15 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಅಂದರೆ ಐಪಿಎಲ್ ಇತಿಹಾಸದಲ್ಲಿ 15 ಅಥವಾ ಅದಕ್ಕಿಂತ ಹೆಚ್ಚಿನ ಬಾರಿ ಶೂನ್ಯಕ್ಕೆ ಔಟಾಗಿರುವುದು ದಿನೇಶ್ ಕಾರ್ತಿಕ್, ರೋಹಿತ್ ಶರ್ಮಾ, ಗ್ಲೆನ್ ಮ್ಯಾಕ್ಸ್ವೆಲ್, ಮಂದೀಪ್ ಸಿಂಗ್ ಹಾಗೂ ಸುನಿಲ್ ನರೈನ್ ಮಾತ್ರ.
ಒಟ್ಟಿನಲ್ಲಿ ಕಳೆದ ಸೀಸನ್ನಲ್ಲಿ ಬಿಗ್ ಶೋ ತೋರಿಸಿದ್ದ ಗ್ಲೆನ್ ಮ್ಯಾಕ್ಸ್ವೆಲ್ ಈ ಬಾರಿಯ ಐಪಿಎಲ್ ಅನ್ನು ಶೂನ್ಯದೊಂದಿಗೆ ಆರಂಭಿಸಿದ್ದಾರೆ. ಇದಾಗ್ಯೂ ಅವರು ಮುಂದಿನ ಪಂದ್ಯದಲ್ಲಿ ತಮ್ಮ ಆರ್ಭಟ ತೋರಿಸಲಿದ್ದಾರಾ ಕಾದು ನೋಡಬೇಕಿದೆ.