ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 48ನೇ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ (Hardik Pandya) 24 ಲಕ್ಷ ರೂ. ದಂಡ ವಿಧಿಸಲಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ.
ಹೀಗಾಗಿ ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರಿಗೆ ತಲಾ 6 ಲಕ್ಷ ರೂ. ದಂಡ ಅಥವಾ ಪಂದ್ಯದ ಶುಲ್ಕದ 25% ರಷ್ಟು ದಂಡ ವಿಧಿಸಲಾಗಿದೆ. ಇದರ ಜೊತೆಗೆ ನಾಯಕ ಹಾರ್ದಿಕ್ ಪಾಂಡ್ಯಗೆ 24 ಲಕ್ಷ ರೂ. ಫೈನ್ ಹಾಕಲಾಗಿದೆ.
ಇದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಇದೀಗ ಈ ತಪ್ಪನ್ನು 2ನೇ ಬಾರಿಗೆ ಪುನರಾವರ್ತಿಸಿದ ಕಾರಣ 24 ಲಕ್ಷ ರೂ. ದಂಡ ವಿಧಿಸಲಾಗಿದೆ.
ಒಂದು ವೇಳೆ ಹಾರ್ದಿಕ್ ಪಾಂಡ್ಯ ಇದೇ ತಪ್ಪನ್ನು ಮೂರನೇ ಬಾರಿಗೆ ಆವರ್ತಿಸಿದರೆ ಒಂದು ಪಂದ್ಯದಿಂದ ನಿಷೇಧಕ್ಕೆ ಒಳಗಾಗಲಿದ್ದಾರೆ. ಈಗಾಗಲೇ 2 ಬಾರಿ ಸ್ಲೋ ಓವರ್ ರೇಟ್ ತಪ್ಪು ಮಾಡಿರುವ ಪಾಂಡ್ಯ ಒಟ್ಟು 36 ಲಕ್ಷ ರೂ. ದಂಡ ಕಟ್ಟಿದ್ದು, ಮೂರನೇ ಬಾರಿ ಇದೇ ತಪ್ಪು ಮಾಡಿದರೆ 30 ಲಕ್ಷ ರೂ. ಫೈನ್ನೊಂದಿಗೆ ಒಂದು ಪಂದ್ಯದ ನಿಷೇಧಕ್ಕೊಳಗಾಗಲಿದ್ದಾರೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಪಾಂಡ್ಯ ಸ್ಲೋ ಓವರ್ ರೇಟ್ ಬಗ್ಗೆ ಹೆಚ್ಚಿನ ಗಮನಹರಿಸಬೇಕಾಗುತ್ತದೆ.
ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್ನಿಂದ ಒಬ್ಬ ಫೀಲ್ಡರ್ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.
ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರಿಗೆ ತಲಾ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.
ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಮೂರು ಬಾರಿ ತಪ್ಪು ಮಾಡಿದ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರು ತಲಾ 12 ಲಕ್ಷ ರೂ. ಅಥವಾ ಪಂದ್ಯದ ಶುಲ್ಕದ ಶೇ. 50 ರಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ.
Published On - 10:35 am, Wed, 1 May 24