- Kannada News Photo gallery Cricket photos IPL 2024: KL Rahul and Ruturaj Gaikwad fined for slow play
IPL 2024: ಕೆಎಲ್ ರಾಹುಲ್-ರುತುರಾಜ್ಗೆ ದಂಡದ ಬರೆ..!
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 17ನೇ ಆವೃತ್ತಿಯ 34ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡವು 176 ರನ್ ಕಲೆಹಾಕಿತು. ಈ ಗುರಿಯನ್ನು 19 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ 8 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ.
Updated on: Apr 20, 2024 | 8:52 AM

ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 34ನೇ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಕ್ಯಾಪ್ಟನ್ ರುತುರಾಜ್ ಗಾಯಕ್ವಾಡ್ಗೆ ದಂಡ ವಿಧಿಸಲಾಗಿದೆ. ಈ ಇಬ್ಬರು ನಾಯಕರುಗಳು ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ.

ಹೀಗಾಗಿ ಕೆಎಲ್ ರಾಹುಲ್ ಹಾಗೂ ರುತುರಾಜ್ ಗಾಯಕ್ವಾಡ್ಗೆ ತಲಾ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಇಬ್ಬರು ನಾಯಕರುಗಳು ಇದೇ ಮೊದಲ ಬಾರಿಗೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದು, ಹೀಗಾಗಿ ಹನ್ನೆರಡು ಲಕ್ಷ ರೂ. ಮಾತ್ರ ದಂಡ ವಿಧಿಸಿದ್ದಾರೆ. ಇನ್ನೆರಡು ಬಾರಿ ಇದೇ ತಪ್ಪನ್ನು ಮುಂದುವರೆಸಿದರೆ ಒಂದು ಪಂದ್ಯದ ನಿಷೇಧಕ್ಕೊಳಗಾಗಲಿದ್ದಾರೆ.

ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್ನಿಂದ ಒಬ್ಬ ಫೀಲ್ಡರ್ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಮೂರು ಬಾರಿ ತಪ್ಪು ಮಾಡಿದ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರು ತಲಾ 12 ಲಕ್ಷ ರೂ. ಅಥವಾ ಪಂದ್ಯದ ಶುಲ್ಕದ ಶೇ. 50 ರಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ.



















