IPL 2024: ರಿಷಭ್ ಪಂತ್ಗೆ ನಿಷೇಧದ ಭೀತಿ
TV9 Web | Updated By: ಝಾಹಿರ್ ಯೂಸುಫ್
Updated on:
Apr 04, 2024 | 11:04 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 16ನೇ ಪಂದ್ಯದಲ್ಲಿ ಕೆಕೆಆರ್ ತಂಡ ಭರ್ಜರಿ ಜಯ ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 272 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 166 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಕೆಕೆಆರ್ 106 ರನ್ಗಳ ಅಮೋಘ ಗೆಲುವು ಸಾಧಿಸಿದೆ.
1 / 6
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 16ನೇ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ಗೆ (Rishabh Pant) 24 ಲಕ್ಷ ರೂ. ದಂಡ ವಿಧಿಸಲಾಗಿದೆ. ವಿಶಾಖಪಟ್ಟಣದ ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ವಿರುದ್ಧ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಮಾಡಿತ್ತು.
2 / 6
ಆದರೆ ಬೌಲಿಂಗ್ ವೇಳೆ ಸ್ಲೋ ಓವರ್ ರೇಟ್ ತಪ್ಪು ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ ಪಂದ್ಯವನ್ನು ಮುಗಿಸಿರಲಿಲ್ಲ. ಈ ಕಾರಣಕ್ಕಾಗಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಂಡ ಆಟಗಾರರಿಗೆ 6 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ಪಾವತಿಸಬೇಕೆಂದು ತಿಳಿಸಲಾಗಿದೆ.
3 / 6
ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್ನಿಂದ ಒಬ್ಬ ಫೀಲ್ಡರ್ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.
4 / 6
ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.
5 / 6
ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಮೂರು ಬಾರಿ ತಪ್ಪು ಮಾಡಿದ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರು ತಲಾ 12 ಲಕ್ಷ ರೂ. ಅಥವಾ ಪಂದ್ಯದ ಶುಲ್ಕದ ಶೇ. 50 ರಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ.
6 / 6
ಇದೀಗ ರಿಷಭ್ ಪಂತ್ 2 ಬಾರಿ ಈ ತಪ್ಪನ್ನು ಮಾಡಿದ್ದಾರೆ. ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ಶಿಕ್ಷೆಗೆ ಗುರಿಯಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ, ಇದೀಗ ಕೆಕೆಆರ್ ವಿರುದ್ಧ ಕೂಡ ಅದೇ ತಪ್ಪನ್ನು ಪುನರಾವರ್ತಿಸಿದ್ದಾರೆ. ಇನ್ನು ಮುಂಬರುವ ಪಂದ್ಯಗಳಲ್ಲಿ ಈ ತಪ್ಪನ್ನು ಮಾಡಿದರೆ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಂದಿನ ಪಂದ್ಯಗಳಲ್ಲಿ ರಿಷಭ್ ಪಂತ್ ಸ್ಲೋ ಓವರ್ ರೇಟ್ ಬಗ್ಗೆ ಎಚ್ಚರಿಕೆವಹಿಸಿಕೊಳ್ಳುವುದು ಅನಿವಾರ್ಯ.