ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ (IPL 2024) 29ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಮುಂಬೈ ಪರ ಆರಂಭಿಕನಾಗಿ ಕಣಕ್ಕಿಳಿದ ಹಿಟ್ಮ್ಯಾನ್ 63 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ ಅಜೇಯ 105 ರನ್ ಬಾರಿಸಿದ್ದರು.
ಈ ಇನಿಂಗ್ಸ್ನಲ್ಲಿ ಮೂಡಿಬಂದ 5 ಸಿಕ್ಸ್ಗಳೊಂದಿಗೆ ಟಿ20 ಕ್ರಿಕೆಟ್ನಲ್ಲಿ 500+ ಸಿಕ್ಸ್ ಬಾರಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ ಐದನೇ ಬ್ಯಾಟರ್ ಎನಿಸಿಕೊಂಡರು.
ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್ನಲ್ಲಿ 1000+ ಫೋರ್ ಹಾಗೂ 500+ ಸಿಕ್ಸ್ ಸಿಡಿಸಿದ 2ನೇ ದಾಂಡಿಗ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಇಂತಹದೊಂದು ಸಾಧನೆ ಮಾಡಿದ್ದು ಕ್ರಿಸ್ ಗೇಲ್ ಮಾತ್ರ.
455 ಟಿ20 ಇನಿಂಗ್ಸ್ ಆಡಿರುವ ಕ್ರಿಸ್ ಗೇಲ್ 1132 ಫೋರ್ ಹಾಗೂ 1056 ಸಿಕ್ಸ್ಗಳನ್ನು ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದೀಗ ಈ ಪಟ್ಟಿಗೆ ರೋಹಿತ್ ಶರ್ಮಾ ಕೂಡ ಸೇರ್ಪಡೆಯಾಗಿದ್ದಾರೆ.
419 ಟಿ20 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ 502 ಸಿಕ್ಸ್ ಹಾಗೂ 1028 ಫೋರ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ 1000+ ಫೋರ್ ಹಾಗೂ 500+ ಸಿಕ್ಸ್ ಸಿಡಿಸಿದ ಮೊದಲ ಭಾರತೀಯ ಹಾಗೂ ವಿಶ್ವದ 2ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
ಇನ್ನು ರೋಹಿತ್ ಶರ್ಮಾ ಅವರ ಶತಕದ ಹೊರತಾಗಿಯೂ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿತು. ಚೆನ್ನೈ ಸೂಪರ್ ಕಿಂಗ್ಸ್ ನೀಡಿದ 206 ರನ್ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 186 ರನ್ ಕಲೆಹಾಕಿತು. ಈ ಮೂಲಕ 20 ರನ್ಗಳಿಂದ ಸೋಲೊಪ್ಪಿಕೊಂಡಿತು.