ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 24ನೇ ಪಂದ್ಯದ ಮೂಲಕ ಶುಭ್ಮನ್ ಗಿಲ್ (Shubman Gill) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 44 ಎಸೆತಗಳನ್ನು ಎದುರಿಸಿದ ಶುಭ್ಮನ್ ಗಿಲ್ 2 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 72 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಗಿಲ್ ಐಪಿಎಲ್ನಲ್ಲಿ 3000 ರನ್ ಪೂರೈಸಿದ್ದಾರೆ.
ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 3 ಸಾವಿರ ರನ್ ಪೂರೈಸಿದ ಅತೀ ಕಿರಿಯ ಬ್ಯಾಟರ್ ಎಂಬ ದಾಖಲೆಯನ್ನು ಶುಭ್ಮನ್ ಗಿಲ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ವಿಶೇಷ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.
ವಿರಾಟ್ ಕೊಹ್ಲಿ ತಮ್ಮ 26ನೇ ವಯಸ್ಸಿನಲ್ಲಿ (26 ವರ್ಷ, 186 ದಿನಗಳು) ಈ ಸಾಧನೆ ಮಾಡಿದ್ದರು. ಈ ಮೂಲಕ ಐಪಿಎಲ್ನಲ್ಲಿ ಅತೀ ವೇಗವಾಗಿ 3 ಸಾವಿರ ರನ್ ಪೂರೈಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದರು.
ಇದೀಗ ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಈ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. 24ನೇ ವಯಸ್ಸಿನಲ್ಲಿಯೇ (24 ವರ್ಷ, 215 ದಿನಗಳು) 3000 ರನ್ ಕಲೆಹಾಕುವ ಮೂಲಕ ಗುಜರಾತ್ ಟೈಟಾನ್ಸ್ ತಂಡದ ನಾಯಕ ಐಪಿಎಲ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಹಾಗೆಯೇ ಐಪಿಎಲ್ನಲ್ಲಿ ಅತೀ ಕಡಿಮೆ ಇನಿಂಗ್ಸ್ಗಳಲ್ಲಿ 3 ಸಾವಿರ ರನ್ ಕಲೆಹಾಕಿದ 2ನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ 80 ಇನಿಂಗ್ಸ್ಗಳ ಮೂಲಕ 3 ಸಾವಿರ ರನ್ ಕಲೆಹಾಕಿದ ಕೆಎಲ್ ರಾಹುಲ್ ಅಗ್ರಸ್ಥಾನದಲ್ಲಿದ್ದರೆ, 94 ಇನಿಂಗ್ಸ್ಗಳಲ್ಲಿ 3000 ರನ್ ಪೇರಿಸಿರುವ ಶುಭ್ಮನ್ ಗಿಲ್ ದ್ವಿತೀಯ ಸ್ಥಾನದಲ್ಲಿದ್ದಾರೆ.