
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 6ನೇ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ವಿರಾಟ್ ಕೊಹ್ಲಿ (Virat Kohli) ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಪಂಜಾಬ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಆಕ್ರಮಣಕಾರಿ ಬ್ಯಾಟಿಂಗ್ಗೆ ಒತ್ತು ನೀಡಿದ್ದರು. ಮೊದಲ ಓವರ್ನಿಂದಲೇ ಸ್ಪೋಟಕ ಬ್ಯಾಟಿಂಗ್ ನಡೆಸಿದ ಕೊಹ್ಲಿ 49 ಎಸೆತಗಳಲ್ಲಿ 11 ಫೋರ್ ಹಾಗೂ 2 ಸಿಕ್ಸ್ನೊಂದಿಗೆ 77 ರನ್ ಚಚ್ಚಿದರು.

ಈ 77 ರನ್ಗಳೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 70+ ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆ ಕಿಂಗ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ಅಪರೂಪದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು.

ಐಪಿಎಲ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ಪರ ಒಟ್ಟು 141 ಪಂದ್ಯಗಳನ್ನಾಡಿರುವ ಕ್ರಿಸ್ ಗೇಲ್ ಒಟ್ಟು 26 ಬಾರಿ 70+ ಸ್ಕೋರ್ ಗಳಿಸಿ ದಾಖಲೆ ನಿರ್ಮಿಸಿದ್ದರು.

ಇದೀಗ ಈ ಅಪರೂಪದ ದಾಖಲೆಯನ್ನು ಅಳಿಸಿ ಹಾಕುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದಾರೆ. ಐಪಿಎಲ್ನಲ್ಲಿ ಇದುವರೆಗೆ ಆಡಿದ 231 ಇನಿಂಗ್ಸ್ಗಳಲ್ಲಿ ಕೊಹ್ಲಿ 27 ಬಾರಿ 70+ ರನ್ ಬಾರಿಸಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಅತ್ಯಧಿಕ ಬಾರಿ 70 ಕ್ಕಿಂತ ಅಧಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ದಾಖಲೆ ಕೂಡ ಕಿಂಗ್ ಕೊಹ್ಲಿ ಹೆಸರಿನಲ್ಲಿದೆ. ವಿರಾಟ್ ಕೊಹ್ಲಿ ಇದುವರೆಗೆ 7 ಶತಕಗಳನ್ನು ಬಾರಿಸಿದ್ದು, ಈ ಬಾರಿಯ ಐಪಿಎಲ್ ಮೂಲಕ ಈ ಶತಕಗಳ ಸಂಖ್ಯೆಯನ್ನು ಎರಡಂಕಿಗೆ ಏರಿಸಲಿದ್ದಾರಾ ಕಾದು ನೋಡಬೇಕಿದೆ.