Virat Kohli: RCB ಸೋತರೂ, 2 ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ
Virat Kohli Records: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸಾಧಾರಣ ಪ್ರದರ್ಶನ ನೀಡಿದರೂ ವಿರಾಟ್ ಕೊಹ್ಲಿ 2 ಭರ್ಜರಿ ದಾಖಲೆ ಬರೆದಿದ್ದಾರೆ. ಈ ದಾಖಲೆಗಳಲ್ಲಿ ಒಂದು ವಿಶ್ವ ದಾಖಲೆ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ನಲ್ಲಿ 12 ಸಾವಿರ ರನ್ ಪೂರೈಸಿದ ವಿಶೇಷ ಸಾಧಕರ ಪಟ್ಟಿಗೆ ಇದೀಗ ಕಿಂಗ್ ಕೊಹ್ಲಿ ಕೂಡ ಸೇರ್ಪಡೆಯಾಗಿದ್ದಾರೆ.
Updated on: Mar 23, 2024 | 7:02 AM

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) 2 ಭರ್ಜರಿ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ಪರ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಇನಿಂಗ್ಸ್ ಆರಂಭಿಸಿದ್ದರು.

ಆರಂಭಿಕನಾಗಿ ಬ್ಯಾಟ್ ಬೀಸಿದ ವಿರಾಟ್ ಕೊಹ್ಲಿ 20 ಎಸೆತಗಳಲ್ಲಿ 21 ರನ್ ಬಾರಿಸಿ ಮುಸ್ತಫಿಜುರ್ ರೆಹಮಾನ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಈ 21 ರನ್ಗಳೊಂದಿಗೆ ಕಿಂಗ್ ಕೊಹ್ಲಿ 2 ದಾಖಲೆಗಳನ್ನು ತಮ್ಮದಾಗಿಸಿಕೊಂಡರು. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1- ಸಾವಿರ ರನ್ ಸರದಾರ: ಐಪಿಎಲ್ ಇತಿಹಾಸದಲ್ಲೇ 2 ತಂಡಗಳ ವಿರುದ್ಧ 1 ಸಾವಿರಕ್ಕೂ ಅಧಿಕ ರನ್ ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆ ವಿರಾಟ್ ಕೊಹ್ಲಿ ಪಾಲಾಗಿದೆ. ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ 15 ರನ್ಗಳಿಸುವುದರೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 1000 ರನ್ ಕಲೆಹಾಕಿದ ವಿಶೇಷ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ವಿರಾಟ್ ಕೊಹ್ಲಿ 1000 ರನ್ ಪೂರೈಸಿ ದಾಖಲೆ ಬರೆದಿದ್ದರು. ಇದೀಗ ಐಪಿಎಲ್ನಲ್ಲಿ 2 ತಂಡಗಳ ವಿರುದ್ಧ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.

2- 12 ಸಾವಿರ ರನ್ಗಳು: ಟಿ20 ಕ್ರಿಕೆಟ್ನಲ್ಲಿ 12 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹಿರಿಮೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ 6 ರನ್ ಕಲೆಹಾಕುವುದರೊಂದಿಗೆ ಕಿಂಗ್ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಅತೀ ಕಡಿಮೆ ಇನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಕ್ರಿಸ್ ಗೇಲ್. ಯೂನಿವರ್ಸ್ ಬಾಸ್ ಖ್ಯಾತಿಯ ಗೇಲ್ ಕೇವಲ 345 ಇನಿಂಗ್ಸ್ಗಳಲ್ಲಿ 12000 ರನ್ ಪೂರೈಸಿ ಟಿ20 ಕ್ರಿಕೆಟ್ನಲ್ಲಿ ದಾಖಲೆ ಬರೆದಿದ್ದಾರೆ. ಇದೀಗ 360 ಇನಿಂಗ್ಸ್ಗಳ ಮೂಲಕ 12 ಸಾವಿರ ರನ್ ಪೂರೈಸಿರುವ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

CSK vs RCB 2024: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡವು 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತು. 174 ರನ್ಗಳ ಸ್ಪರ್ಧಾತ್ಮಕ ಟಾರ್ಗೆಟ್ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 18.4 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.



















