IPL 2025 RCB vs DC: ಗೆದ್ದವರೇ ನಂಬರ್ 1
IPL 2025 DC vs RCB: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 46ನೇ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್ನಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ.
Updated on: Apr 27, 2025 | 8:26 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 46ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರುವುದು ಖಚಿತ.

ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 12 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, ಆರ್ಸಿಬಿ ತಂಡ 12 ಪಾಯಿಂಟ್ಸ್ನೊಂದಿಗೆ ತೃತೀಯ ಸ್ಥಾನದಲ್ಲಿದೆ. ಉಭಯ ತಂಡಗಳ ನಡುವಣ ಈ ಪಂದ್ಯದಲ್ಲಿ ಗೆಲ್ಲುವ ತಂಡ 14 ಅಂಕಗಳೊಂದಿಗೆ ಗುಜರಾತ್ ಟೈಟಾನ್ಸ್ ತಂಡವನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಲಿದೆ.

ಇನ್ನು ಇಂದಿನ ಪಂದ್ಯದಲ್ಲಿ ಜಯಗಳಿಸುವ ತಂಡವು ತನ್ನ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಸುಗಮಗೊಳಿಸಲಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆಲುವು ದಾಖಲಿಸಿದರೆ ಒಟ್ಟು 14 ಅಂಕಗಳನ್ನು ಪಡೆಯಬಹುದು. ಅಲ್ಲದೆ ಮುಂದಿನ 4 ಮ್ಯಾಚ್ಗಳಲ್ಲಿ ಒಂದು ಜಯ ಸಾಧಿಸಿದರೆ 16 ಅಂಕಗಳೊಂದಿಗೆ ಪ್ಲೇಆಫ್ಗೆ ಪ್ರವೇಶಿಸಬಹುದು. ಹೀಗಾಗಿ ಇಂದಿನ ಮ್ಯಾಚ್ ಉಭಯ ತಂಡಗಳಿಗೆ ಮಹತ್ವದ ಪಂದ್ಯವಾಗಿ ಮಾರ್ಪಟ್ಟಿದೆ.

ಇದಾಗ್ಯೂ ಇಂದಿನ ಪಂದ್ಯದಲ್ಲಿ ಆರ್ಸಿಬಿ ಪಾಲಿಗೆ ಗೆಲುವು ಅಂದುಕೊಂಡಷ್ಟು ಸುಲಭವಲ್ಲ. ಏಕೆಂದರೆ ಕಳೆದ ಪಂದ್ಯದಲ್ಲಿ ರಾಯಲ್ ಪಡೆ ವಿರುದ್ಧ ಪಾರುಪತ್ಯ ಮೆರೆಯುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಡೆಲ್ಲಿ ಬಾಯ್ಸ್ ಕಡೆಯಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಇನ್ನು ಉಭಯ ತಂಡಗಳು ಈವರೆಗೆ 32 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 19 ಬಾರಿ ಗೆಲುವು ದಾಖಲಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ 12 ಸಲ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು.

ಇಲ್ಲಿ ಆರ್ಸಿಬಿ ಮೇಲುಗೈ ಹೊಂದಿದ್ದರೂ, ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬಲಿಷ್ಠವಾಗಿದೆ. ಹೀಗಾಗಿ ಈ ಹಿಂದಿನ ಅಂಕಿ ಅಂಶಗಳು ಇಲ್ಲಿ ಗಣನೆಗೆ ಬರುವುದಿಲ್ಲ ಎನ್ನಬಹುದು. ಅದರಲ್ಲೂ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೆಎಲ್ ರಾಹುಲ್ ಸೇರಿದಂತೆ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ದೆಹಲಿ ಜೇಟ್ಲಿ ಸ್ಟೇಡಿಯಂನಲ್ಲಿ ಆರ್ಸಿಬಿ ಮತ್ತು ಡಿಸಿ ನಡುವೆ ಭರ್ಜರಿ ಪೈಪೋಟಿಯನ್ನಂತು ನಿರೀಕ್ಷಿಸಬಹುದು.




