
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 65ನೇ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ಆದರೆ ಈ ಪಂದ್ಯದಲ್ಲಿ ಪಾಟಿದಾರ್ ನಾಯಕನಾಗಿರಲಿಲ್ಲ ಎಂಬುದು ವಿಶೇಷ.

ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಈ ಪಂದ್ಯದಲ್ಲಿ ರಜತ್ ಪಾಟಿದಾರ್ ಬದಲಿಗೆ ಜಿತೇಶ್ ಶರ್ಮಾ ಆರ್ಸಿಬಿ ತಂಡವನ್ನು ಮುನ್ನಡೆಸಿದ್ದರು. ಇದಾಗ್ಯೂ ಪಾಟಿದಾರ್ ಆರ್ಸಿಬಿ ಪರ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದರು. ಐಪಿಎಲ್ ನಿಯಮಗಳ ಪ್ರಕಾರ, ಪಂದ್ಯದ ದಿನದಂದು ಯಾರು ಮುನ್ನಡೆಸಿದರೂ, ಅಧಿಕೃತ ತಂಡದ ನಾಯಕ ಆಡುವ ಬಳಗದಲ್ಲಿ ಕಾಣಿಸಿಕೊಂಡರೆ ಓವರ್ ರೇಟ್ ಉಲ್ಲಂಘನೆಗೆ ಜವಾಬ್ದಾರನಾಗಿರುತ್ತಾನೆ. ಹೀಗಾಗಿಯೇ ಪಾಟಿದಾರ್ ಅವರಿಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

ವಿಶೇಷ ಎಂದರೆ ಈ ಬಾರಿಯ ಐಪಿಎಲ್ನಲ್ಲಿ ಒಟ್ಟು 9 ನಾಯಕರುಗಳು ದಂಡದ ಶಿಕ್ಷೆಗೆ ಒಳಗಾಗಿದ್ದಾರೆ. ಇವರಲ್ಲಿ ರಿಷಭ್ ಪಂತ್ ಮೂರು ಬಾರಿ ದಂಡ ಕಟ್ಟಿದರೆ, ರಜತ್ ಪಾಟಿದಾರ್ 2 ಬಾರಿ ದಂಡದ ಶಿಕ್ಷೆಗೆ ಒಳಗಾಗಿದ್ದಾರೆ. ಹೀಗೆ ದಂಡ ಕಟ್ಟಿಸಿಕೊಂಡ ಕ್ಯಾಪ್ಟನ್ಗಳು ಯಾರೆಲ್ಲಾ ಎಂದು ನೋಡುವುದಾದರೆ...

ಶ್ರೇಯಸ್ ಅಯ್ಯರ್: ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿಲ್ಲ. ಹೀಗಾಗಿ ಅಯ್ಯರ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಪ್ಯಾಟ್ ಕಮಿನ್ಸ್: ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ನಿಗದಿತ ಸಮಯದಲ್ಲಿ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಕಮಿನ್ಸ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಅಕ್ಷರ್ ಪಟೇಲ್: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಹಾರ್ದಿಕ್ ಪಾಂಡ್ಯ: ಮಾರ್ಚ್ 30 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಹಮದಾಬಾದ್ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ವಿಧಿಸಲಾಗಿದೆ.

ರಿಯಾನ್ ಪರಾಗ್: ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪರಾಗ್ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ರಿಷಭ್ ಪಂತ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಗಳಲ್ಲಿ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದ ಕಾರಣ ಪಂತ್ ಒಟ್ಟು 36 ಲಕ್ಷ ರೂ. (12+24) ದಂಡ ಪಾವತಿಸಿದ್ದರು. ಇದೀಗ ಆರ್ಸಿಬಿ ವಿರುದ್ಧ ಕೂಡ ಸ್ಲೋ ಓವರ್ ರೇಟ್ ತಪ್ಪು ಮಾಡಿರುವ ಕಾರಣ 30 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಲ್ಲದೆ ಮೂರನೇ ಬಾರಿಗೆ ಸ್ಲೋ ಓವರ್ ರೇಟ್ ತಪ್ಪನ್ನು ಪುನರಾವರ್ತಿಸಿರುವ ಕಾರಣ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ಲೇಯಿಂಗ್ ಇಲೆವೆನ್ನ ಆಟಗಾರಿಗೂ ತಲಾ 12 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ಹಾಕಲಾಗಿದೆ.

ಸಂಜು ಸ್ಯಾಮ್ಸನ್: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಕೂಡ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಮುಗಿಸಿರಲಿಲ್ಲ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡವು ರಿಯಾನ್ ಪರಾಗ್ ನಾಯಕತ್ವದಲ್ಲಿ ಒಮ್ಮೆ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದರಿಂದ, 2ನೇ ಬಾರಿ ತಪ್ಪು ಪುನರಾವರ್ತಿಸಿದ ಕಾರಣ ಸ್ಯಾಮ್ಸನ್ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

ರಜತ್ ಪಾಟಿದಾರ್: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಇದೀಗ ಆರ್ಸಿಬಿ ತಂಡದ ನಾಯಕ ರಜತ್ ಪಾಟಿದಾರ್ಗೆ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಆ ಬಳಿಕ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸ್ಲೋ ಓವರ್ ರೇಟ್ ತಪ್ಪನ್ನು ಪುನರಾವರ್ತಿಸಿದ ಕಾರಣ ಪಾಟಿದಾರ್ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.
Published On - 10:32 am, Sun, 25 May 25