IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 8ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅತ್ಯಂತ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ನಿಧಾನಗತಿಯ ಬ್ಯಾಟಿಂಗ್ನೊಂದಿಗೆ 31 ರನ್ ಕಲೆಹಾಕಿರುವ ಕೊಹ್ಲಿ ಹೆಸರಿಗೆ ಹೊಸ ದಾಖಲೆಯೊಂದು ಸೇರ್ಪಡೆಯಾಗಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ಕೆ ತಂಡವು ಬೌಲಿಂಗ್ ಆಯ್ದುಕೊಂಡಿತು.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಸಾಲ್ಟ್ 16 ಎಸೆತಗಳಲ್ಲಿ 32 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ 31 ರನ್ ಕಲೆಹಾಕಲು ಬರೋಬ್ಬರಿ 30 ಎಸೆತಗಳನ್ನು ತೆಗೆದುಕೊಂಡರು. ಈ ಮೂವತ್ತು ರನ್ಗಳೊಂದಿಗೆ ಕೊಹ್ಲಿ ಸಿಎಸ್ಕೆ ವಿರುದ್ಧ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಶಿಖರ್ ಧವನ್ ಹೆಸರಿನಲ್ಲಿತ್ತು. ಧವನ್ ಸಿಎಸ್ಕೆ ವಿರುದ್ಧ ಆಡಿದ 29 ಪಂದ್ಯಗಳಲ್ಲಿ ಒಟ್ಟು 1057 ರನ್ ಬಾರಿಸಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅತ್ಯಂತ ಯಶಸ್ವಿ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದರು.
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದಾರೆ. ಕಿಂಗ್ ಕೊಹ್ಲಿ ಸಿಎಸ್ಕೆ ವಿರುದ್ಧ ಈವರೆಗೆ 33 ಇನಿಂಗ್ಸ್ ಆಡಿದ್ದು, ಈ ವೇಳೆ 9 ಅರ್ಧಶತಕಗಳೊಂದಿಗೆ 1084 ರನ್ ಕಲೆಹಾಕಿದ್ದಾರೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಇನ್ನು ವಿರಾಟ್ ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್ ಹೊರತಾಗಿಯೂ ಈ ಪಂದ್ಯದಲ್ಲಿ ಆರ್ಸಿಬಿ ತಂಡ 20 ಓವರ್ಗಳಲ್ಲಿ 196 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 146 ರನ್ಗಳಿಸಿ 50 ರನ್ಗಳಿಂದ ಸೋಲೊಪ್ಪಿಕೊಂಡಿದೆ.
Published On - 9:04 am, Sat, 29 March 25