ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2025) ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಣಕ್ಕಿಳಿಯಲಿದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಏಕೆಂದರೆ ಕಳೆದ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ನಾಯಕ ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿದೆ.
ಈ ಒಂದು ಪಂದ್ಯದ ನಿಷೇಧದ ಶಿಕ್ಷೆ ಈ ಬಾರಿಯ ಐಪಿಎಲ್ನಲ್ಲಿ ಮುಂದುವರೆಯಲಿದೆ. ಅದರಂತೆ ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೊದಲ ಪಂದ್ಯದಿಂದ ನಾಯಕ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಕ್ಯಾಪ್ಟನ್ ಆಗಿ ಕಣಕ್ಕಿಯಲಿದ್ದಾರೆ.
ಅಂದಹಾಗೆ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮುನ್ನ 2023 ರಲ್ಲಿ ರೋಹಿತ್ ಶರ್ಮಾ ಅವರು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಕಾರಣ ಅವರು ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ್ದರು.
ಇದೀಗ ಮತ್ತೊಮ್ಮೆ ಸೂರ್ಯಕುಮಾರ್ ಯಾದವ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲು ಮುಂಬೈ ಇಂಡಿಯನ್ಸ್ ತಂಡ ಸಜ್ಜಾಗಿದೆ. ಅದು ಸಹ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ಗೆ ಸೂರ್ಯಕುಮಾರ್ ಯಾದವ್ ಆಘಾತ ನೀಡಲಿದ್ದಾರಾ ಕಾದು ನೋಡಬೇಕಿದೆ.