IPL 2025: ಐಪಿಎಲ್ನಲ್ಲಿ ಭರ್ಜರಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
Yashasvi Jaiswal Record: ಇಂಡಿಯನ್ ಪ್ರೀಮಿಯರ್ ಲೀಗ್ನ 61ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡವು 187 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ 19 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 36 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ ನೆರವಿನೊಂದಿಗೆ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು 6 ವಿಕೆಟ್ಗಳ ಜಯ ಸಾಧಿಸಿದೆ.
Updated on: May 21, 2025 | 10:32 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಕೂಡ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಮುರಿಯುವ ಮೂಲಕ ಎಂಬುದು ವಿಶೇಷ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 61ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಿದ್ದರು.

ಸಿಎಸ್ಕೆ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಾಣಿಸಿಕೊಂಡ ಯಶಸ್ವಿ ಜೈಸ್ವಾಲ್ ಮೊದಲ ಎಸೆತದಲ್ಲೇ ಫೋರ್ ಬಾರಿಸಿದರು. ಈ ಫೋರ್ನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಇನಿಂಗ್ಸ್ನ ಮೊದಲ ಎಸೆತದಲ್ಲಿ ಅತೀ ಹೆಚ್ಚು ಬಾರಿ ಬೌಂಡರಿ ಬಾರಿಸಿದ ದಾಖಲೆಯೊಂದು ಯಶಸ್ವಿ ಜೈಸ್ವಾಲ್ ಪಾಲಾಯಿತು.

ಇದಕ್ಕೂ ಮುನ್ನ ಇಂತಹದೊಂದು ದಾಖಲೆ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿತ್ತು. ಡ್ಯಾಶಿಂಗ್ ಓಪನರ್ ಆಗಿ ಗುರುತಿಸಿಕೊಂಡಿದ್ದ ಸೆಹ್ವಾಗ್ 2014 ರ ಐಪಿಎಲ್ನಲ್ಲಿ 5 ಬಾರಿ ಇನಿಂಗ್ಸ್ನ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ.

2023 ರಲ್ಲಿ ಯಶಸ್ವಿ ಜೈಸ್ವಾಲ್ 5 ಬಾರಿ ಇನಿಂಗ್ಸ್ನ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿ ವೀರೇಂದ್ರ ಸೆಹ್ವಾಗ್ ಅವರ ದಾಖಲೆ ಸರಿಗಟ್ಟಿದ್ದರು. ಇದೀಗ 2025 ರಲ್ಲೂ ಈ ಸಾಧನೆಯನ್ನು ಪುನರಾವರ್ತಿಸಿದ್ದಾರೆ. ಈ ಬಾರಿಯ ಐಪಿಎಲ್ನಲ್ಲಿ 14 ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಿರುವ ಯಶಸ್ವಿ ಜೈಸ್ವಾಲ್ 5 ಬಾರಿ ಮೊದಲ ಎಸೆತದಲ್ಲೇ ಬೌಂಡರಿ ಸಿಡಿಸಿದ್ದಾರೆ.

ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಎರಡು ಸೀಸನ್ಗಳಲ್ಲಿ 10 ಬಾರಿ ಇನಿಂಗ್ಸ್ನ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ದಾಖಲೆಯೊಂದಿಗೆ ಯಶಸ್ವಿ ಜೈಸ್ವಾಲ್ ಈ ಬಾರಿ 559 ರನ್ ಕಲೆಹಾಕುವ ಮೂಲಕ ಐಪಿಎಲ್ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ.




